ಹಾಸನ: ಜಿಲ್ಲೆಯ ಅರಸೀಕೆರೆ ಬಳಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಒಂಬತ್ತು ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕೆಆರ್‌ಪೇಟೆ ತಾಲೂಕಿನ ಅಂಬಿಗ್ರಾಮ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶವಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.
ಬಾಣಾವರ ಪೊಲೀಸ್ ವ್ಯಾಪ್ತಿಯ ಚಲುವನಹಳ್ಳಿ ಬಳಿ ಸರ್ಕಾರಿ ಬಸ್ ಮತ್ತು ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧರ್ಮಸ್ಥಳ ಯಾತ್ರೆಯಿಂದ ಟೆಂಪೋ ಟ್ರಾವೆಲರ್‌ನಲ್ಲಿ ಯಾತ್ರಾರ್ಥಿಗಳು ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಟೆಂಪೋ ಟ್ರಾವೆಲರ್‌ನಲ್ಲಿ 14 ಮಂದಿ ಯಾತ್ರಿಕರು ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.