ಕುಂದಾಪುರ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅವರ ಗ್ರಾಮಗಳಿಗೆ ತೆರಳಿ, ಅರಿತು ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಮತ್ತು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಜ.21 ರಂದು ನಾಗೂರಿನಶ್ರೀ ಲಲಿತ ಕೃಷ್ಣ ಕಲಾಮಂದಿರದಲ್ಲಿ ನಡೆದ ಕಿರಿಮಂಜೇಶ್ವರ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ, ಸಾರ್ವಜನಿಕರಿಗೆ ಸಂಬಂಧಿಸಿದ ವಿವಿಧ ಇಲಾಖೆಯ ಸಮಸ್ಯೆಗಳ ಬಗ್ಗೆ ಒಂದೇ ಸೂರಿನಡಿ, ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸ್ಥಳದಲ್ಲೇ ಪರಿಹಾರ ದೊರಕಿಸಲಾಗುತ್ತಿದೆ. ಸಮಸ್ಯೆಗಳಲ್ಲಿ ತಾಂತ್ರಿಕ ಮತ್ತು ಕಾನೂನು ತೊಡಕುಗಳಿದ್ದಲ್ಲಿ ಅವುಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಆದ್ಯತೆ ಮೇಲೆ ಇತ್ಯರ್ಥ ಪಡಿಸಲು ಪ್ರಯತ್ನಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಫಲಾನುಭವಿಗಳಿಗೆ ಸವಲತ್ತು, ವಿತರಿಸಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ಸರ್ಕಾರ ಹಾಗೂ ಸಂಸದರ ಸಹಕಾರದಿಂದ ಸುಮಾರು ಮೂರುವರೆ ಸಾವಿರ ಕೋಟಿಗೂ ಮೀರಿ ಅನುದಾನ ಬಂದಿದ್ದು, ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಅಭಿವೃದ್ಧಿಪಡಿಸಲಾಗಿದೆ. ಈ ಭಾಗದ ಐದು ಹಳ್ಳಿಗಳಿಗೆ ಕೃಷಿಗೆ ನೀರನ್ನು ಒದಗಿಸುವ ಉದ್ದೇಶದಿಂದ ಶೀಘ್ರದಲ್ಲಿ ಸುಮಾರು 78 ಕೋಟಿ ರೂ. ವೆಚ್ಚದಲ್ಲಿ ಶ್ರೀ ಗುಡೇ ಮಹಾಲಿಂಗೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪ್ರಸನ್ನ ಹೆಚ್, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು, ಬೈಂದೂರು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭಾರತಿ, ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶೇಖರ ಖಾರ್ವಿ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.