ಬೆಂಗಳೂರು: ವಿಧಾನಸಭಾ ಚುನಾವಣಾಗೆ ಭರ್ಜರಿ ತಯಾರಿ ನಡೆಸುತ್ತಿರುವ ರಾಜಕೀಯ ಪಕ್ಷಗಳ ನಡುವೆ , ಕೊನೆಗೂ ಆಡಳಿತರೂಢ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಭಾನುವಾರ ರಾತ್ರಿ ಅಂತಿಮಗೊಳ್ಳಲಿದೆ
2018 ರಲ್ಲಿ ನಾಲ್ಕು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಈ ಬಾರಿ ಮೂರು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಚಿಂತನೆ ನಡೆಸಿದದ್ದು, ಮೊದಲ ಪಟ್ಟಿಯಲ್ಲಿ 100 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಲಿದೆ. ಇನ್ನೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಮಣೆ ಹಾಕುವಂತಹ ಸಾಧ್ಯತೆ ಹೆಚ್ಚಾಗಿದೆ.
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸೇರಿದಂತೆ ಹಲವು ರಾಜ್ಯ ನಾಯಕರು ಶುಕ್ರವಾರ ಸಂಜೆ ದೆಹಲಿ ತಲುಪಿದರು. ಅದರ ಬೆನ್ನಲ್ಲೇ ಕೆಲಹೊತ್ತು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಸಮಾಲೋಚನೆಯನ್ನೂ ನಡೆಸಿದರು.
ಶನಿವಾರ ಹಾಗೂ ಭಾನುವಾರದ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಸರಣಿ ಸಭೆಗಳು ನಡೆಯಲಿದ್ದು, ಈ ವೇಳೆ 75 ವರ್ಷ ವಯಸ್ಸಾದವರಿಗೆ ಟಿಕೆಟ್ ನೀಡಬೇಕೆ ಅಥವಾ ಬೇಡವೆ? ಮೂರು ಅಥವಾ ಅದಕ್ಕೂ ಹೆಚ್ಚು ಬಾರಿ ಶಾಸಕರಾದವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡಬೇಕೆ ಅಥವಾ ಬೇಡವೆ ಎಂಬಿತ್ಯಾದಿ ಅಂಶಗಳ ಬಗ್ಗೆ ಚರ್ಚೆ ನಡೆದು ಸ್ಪಷ್ಟನಿಲುವು ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.