ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸೋತಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿದೆ. ಈ ಸೋಲಿನ ಹೊಣೆಯನ್ನು ತಾವು ಹೊತ್ತುಕೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದು, ಮುಂಬರುವ ಲೋಕಸಭಾ ಚುನಾವಣೆ ಕಡೆ ಗಮನ ಹರಿಸಿ ಗೆಲ್ಲುವ ಭರವಸೆಯನ್ನು ಅವರು ನೀಡಿದ್ದಾರೆ.
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಲಿನ ಹೊಣೆಯನ್ನು ಸಂಪೂರ್ಣವಾಗಿ ನಾನೇ ಹೊತ್ತುಕೊಳ್ಳುತ್ತೇನೆ. ವಿರೋಧ ಪಕ್ಷದಲ್ಲಿದ್ದುಕೊಂಡು ಒಳ್ಳೆಯ ಕೆಲಸ ಮಾಡುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದಿದ್ದಾರೆ.
ಬಿಜೆಪಿಯಿಂದ ಆಯ್ಕೆ ಆಗಿರುವವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಾಂಗ್ರೆಸ್ಗೂ ಅಭಿನಂದನೆ ಸಲ್ಲಿಸುತ್ತೇನೆ. ಜನತೆಯ ತೀರ್ಪನ್ನು ಸ್ವಾಗತಿಸುತ್ತೇವೆ. ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಕೆಲಸ ಮಾಡಿದ್ದಾರೆ. ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷ ಆಗಿ ನಾನು ಹೊಣೆ ಹೊರುತ್ತೇನೆ. ಸೋತಿರೋ ಕಡೆ ಯಾಕೆ ಸೋತಿದ್ದೇವೆ ಎಂದು ಪರಾಮರ್ಶೆ ಮಾಡುತ್ತೇವೆ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.