ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಈ ಸಂದರ್ಭ ಪೊಲೀಸರ ಈ ಅಮಾನವೀಯ ಕೃತ್ಯವನ್ನು ಖಂಡಿಸಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಮತ್ತು ವರ್ತನೆಯ ದರ್ಶನವಾಗುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದರು.
ಈ ಬಗ್ಗೆ ದ.ಕ. ಜಿಲ್ಲಾ ಎಸ್ಪಿಗೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುಂತೆ ಒತ್ತಾಯಿಸಿದ್ದೇನೆ. ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿರುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರ ಸೇರಿದಂತೆ ಹಿಂದೂ ಸಮಾಜ ಹೋರಾಟ ನಡೆಸುತ್ತದೆ ಎಂದರು.
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಸ್ಪಷ್ಟನೆ
ದಕ್ಷಿಣ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಪ್ರಕರಣದ ಮಾಹಿತಿ ನೀಡಿ ಮಾತನಾಡಿ,
ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಪ್ರದೇಶವನ್ನು ಕುರೂಪಗೊಳಿಸಿದ ಸೆಕ್ಷನ್ ನಡಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ 9 ಜನರನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿಸಿದರು.
ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಲೀಸ್ ವಶದಲ್ಲಿದ್ದವರ ಮೇಲೆ ಪೋಲೀಸ್ ದೌರ್ಜನ್ಯ ನಡೆದಿದೆ ಎನ್ನುವ ಸುದ್ದಿ ಹರಿದಾಡಿದೆ. ಈ ಸಂಬಂಧ ದೌರ್ಜನ್ಯಕ್ಕೊಳಗಾದ ವ್ಯಕ್ತಿಗಳು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ದೌರ್ಜನ್ಯಕ್ಕೊಳಗಾದ ಅವಿನಾಶ್ ನೀಡಿದ ದೂರಿನ್ವಯ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದರು.
ಪುತ್ತೂರು ಡಿವೈಎಸ್ಪಿ , ಪುತ್ತೂರು ಗ್ರಾಮಾಂತರ ಠಾಣೆ ಎಸೈ ಮತ್ತು ಪುತ್ತೂರು ನಗರ ಪೋಲೀಸ್ ಠಾಣೆಯ ಸಿಬ್ಬಂದಿ ವಿರುದ್ಧ ದೂರು ನೀಡಿದ್ದಾರೆ. ದೂರಿನ ಹಿನ್ನಲೆಯಲ್ಲಿ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಇಲಾಖಾ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೋಲೀಸರ ವಿರುದ್ಧ ಅಮಾನತು ಅಥವಾ ಇಲಾಖಾ ಕ್ರಮ ಸಾಧ್ಯತೆ ಇದೆ ಎಂದು ಅಮಟೆ ಮಾಹಿತಿ ನೀಡಿದ್ದಾರೆ.