ನವದೆಹಲಿ: ಮೇ 20 ರಂದು ನಡೆಯಲಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಮಹಾರಾಷ್ಟ್ರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.
ಹೇಮಂತ್ ಸೋರೆನ್, ಸೀತಾರಾಮ್ ಯೆಚೂರಿ, ಫಾರೂಕ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಸಮಾನ ಮನಸ್ಕ ವಿರೋಧ ಪಕ್ಷಗಳು ಮತ್ತು ಅವರ ನಾಯಕರಿಗೂ ಆಹ್ವಾನ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಆಹ್ವಾನ ಕಳಿಸಲಾಗಿದೆ. ಹಿಮಾಚಲ ಸಿಎಂ ಸುಖವಿಂದರ್ ಸಿಂಗ್ ಸುಖು, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಏತನ್ಮಧ್ಯೆ, ಮುಖ್ಯಮಂತ್ರಿ ಘೋಷಣೆಯ ನಂತರ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಇಂದು ಸಂಜೆ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.