ಬೆಂಗಳೂರು: ಜೂನ್ 11 ರಂದು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆಗೆ ಚಾಲನೆ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜೂನ್ 9 ರಂದು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ ನಿರ್ದೇಶನ ನೀಡಿದರು. ಈ ಯೋಜನೆಯಿಂದ ಶೇ.50ರಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಖಾತರಿ ಯೋಜನೆಗಳಲ್ಲಿ ಇದು ಮೊದಲನೆಯದ್ದಾಗಿದ್ದು, ಕರ್ನಾಟಕದ ಜನರಿಗಾಗಿ ಇದನ್ನು ಪ್ರಾರಂಭಿಸಲಾಗುವುದು. ಬೆಲೆ ಏರಿಕೆ ಮತ್ತು ಹಣದುಬ್ಬರದಿಂದ ಸಂಕಷ್ಟದಲ್ಲಿರುವ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಸಮಾಧಾನ ತಂದಿದೆ. ಹೆಚ್ಚಿನ ಹಣ ಕ್ರೋಢೀಕರಣಾದ ಅವಶ್ಯಕತೆ ಇದ್ದರೂ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ಎಲ್ಲ ಖಾತ್ರಿ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಅವರು ಹೇಳಿದ್ದಾರೆ.
ಶಕ್ತಿ ಯೋಜನೆಯು ಜಾತಿ, ಧರ್ಮ ಮತ್ತು ವರ್ಗವನ್ನು ಲೆಕ್ಕಿಸದೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಕಚೇರಿಯ ಪ್ರಕಟಣೆಯ ಪ್ರಕಾರ, ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದು, ಸಚಿವರು ಮತ್ತು ಶಾಸಕರು ಏಕಕಾಲದಲ್ಲಿ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ.