ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಳಿಕ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್‌ಸ್ಟೆಬಲ್ ಹರ್ಷಿತ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಡಿವೈಎಸ್ಪಿ ವೀರಯ್ಯ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ನಗರದ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಬಂಧಿಸಿ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದ ಆರೋಪ ಎದುರಾಗಿತ್ತು.
ದೌರ್ಜನ್ಯಕ್ಕೊಳಗಾಗಿದ್ದ ಯುವಕ ಅವಿನಾಶ್ ತಂದೆ ವೇಣುನಾಥ ನರಿಮೊಗರು ನೀಡಿರುವ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೂ.16ರಂದು ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದು ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.












