ಕುಂದಾಪುರ : ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 28 ರಂದು ಭೌತಶಾಸ್ತ್ರದ ಉಪನ್ಯಾಸಕರಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಉಪನ್ಯಾಸಕರು ಅತ್ಯುತ್ತಮ ಬೋಧನಾ ಶೈಲಿಯನ್ನು ಅಳವಡಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಬಿದ್ಕಲ್ ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮತ್ತು ಉಡುಪಿ ಜಿಲ್ಲಾ ಭೌತ ಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ವಿಘ್ನೇಶ್ವರ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಗೌರವಾಧ್ಯಕ್ಷ ಯು. ಲಕ್ಷ್ಮೀನಾರಾಯಣ ಛಾತ್ರ, ಗೋವಾ ವಿಶ್ವ ವಿದ್ಯಾಲಯದಲ್ಲಿ ಭೌತಶಾಸ್ತ್ರ ಹಾಗೂ ಅನ್ವಯಿಕ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಡಾ. ವೆಂಕಟೇಶ್. ಆರ್.ಹತ್ವಾರ್, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿ ಸಿ. ಎಸ್. ಉಮಾಪತಿ ಸ್ವಾಗತಿಸಿದರು. ಖಜಾಂಚಿ ಸದಾನಂದ ವಂದಿಸಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಭರತ್ ಚಂದ್ರ. ಕೆ ನಿರೂಪಿದರು.