ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 4 ವರದಕ್ಷಿಣೆ ಪ್ರಕರಣಗಳಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹೆಚ್ ತಿಳಿಸಿದರು.
ಅವರು ಸೋಮವಾರದಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ತಮ್ಮ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಲು ತರಬೇತಿ ನೀಡಿ ಅವರನ್ನುಆರ್ಥಿಕವಾಗಿ ಸಬಲರನ್ನಾಗಿಸಬೇಕು. ಸರ್ಕಾರ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯ ಮಹಿಳೆಯರು ಇವುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ ಫಲಾನುಭವಿಗಳಾಗಿ ಆರ್ಥಿಕವಾಗಿ ಸಬಲರಾಗುವಂತೆ ಮಾಡಬೇಕು. ಸಾಂತ್ವಾನ ಕೇಂದ್ರಗಳಿಗೆ ಸಮಸ್ಯೆಯನ್ನು ಹೊತ್ತು ತಂದ ಮಹಿಳೆಯರಿಗೆ ಸಮಾಲೋಚನೆಗಳನ್ನು ನಡೆಸುವುದರ ಮೂಲಕ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಹಾಗೂ ಮಾರಾಟ ನಿಷೇಧ ಕಾಯ್ದೆಗಳನ್ನು ಅನುಷ್ಠಾನಗೊಳಿಸಲು ಗ್ರಾಮ ಪಂಚಾಯತಿ ಮಟ್ಟದ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯಚಟುವಟಿಕೆಗಳನ್ನು ಮಾಡಿ ಇಂತಹ ಪ್ರಕರಣಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದ ಅವರು ಶಿಶು ಪಾಲನಾ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಮೂಲಭೂತ ಸೌಕರ್ಯ ಕಲ್ಪಿಸಲು ಸೂಚಿಸಿದರು.
ಜಿಲ್ಲೆಯಲ್ಲಿ ಸ್ತ್ರೀ ಶಕ್ತಿ ಭವನಗಳು ಮಹಿಳೆಯರ ಚಟುವಟಿಕೆಗೆ ಪೂರಕವಾಗಿ ಇರಬೇಕು. ಮಹಿಳೆಯರ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸ್ತ್ರೀ ಶಕ್ತಿ ಭವನದಲ್ಲಿ ನಡೆಸಲು ಅನುಮತಿ ನೀಡಬೇಕು ಎಂದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಎಎಸ್ಪಿ ಎಸ್ ಸಿದ್ಧಲಿಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ ಹೆಚ್ ಕೃಷ್ಣಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇಲಾಖಾ ವರ್ಗದವರು ಉಪಸ್ಥಿತರಿದ್ದರು.