ಲಕ್ನೋ: ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಪ್ರಿಯಾಂಕ್ ಖರ್ಗೆ ವಿರುದ್ದ ಕೇಸು ದಾಖಲಿಸಲಾಗಿದೆ.
ಮಂಗಳವಾರ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಸ್ಟಾಲಿನ್ ಅವರ ಹೇಳಿಕೆಯ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ರಾಜಕಾರಣಿಯ ಹೇಳಿಕೆಗಳು ತಮ್ಮ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.
ಶನಿವಾರ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿ ನಿರ್ಮೂಲನೆಗೆ ಕರೆ ನೀಡಿದ್ದರು. ಅವರ ಈ ನಡೆ ದೇಶಾದ್ಯಂತ ಟೀಕೆಗೆ ಕಾರಣವಾಗಿದೆ.