ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವಾರ್ಷಿಕ ಸಭೆ: ಚುನಾವಣಾ ಪೂರ್ವ ತಯಾರಿ ಕುರಿತು ಸಮಾಲೋಚನೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಕಾರ್ಯಕರ್ತರ ಮಾಸಿಕ ಸಭೆಯು ಅ.1 ಆದಿತ್ಯವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಪಕ್ಷ ಸಂಘಟನೆ ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಬೂತ್ ಸಮಿತಿ ರಚನೆಯ ಕುರಿತು ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ಸಲಹೆ-ಸೂಚನೆಯನ್ನು ನೀಡಿದರು. ಮುಂಬರುವ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವತಯಾರಿ ಬಗ್ಗೆ ಪದವೀಧರರ ನೋಂದಣಿ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು.

ಕೆ.ಪಿ.ಸಿ.ಸಿ ಆದೇಶದಂತೆ ಉಡುಪಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಬೃಹತ್ ಸಮಾವೇಶ ಮಾಡುವುದರ ಬಗ್ಗೆ ಚರ್ಚಿಸಲಾಯಿತು. ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಪ್ರತಿಭಟಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಹುಕೋಟಿ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಬೇಕೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಎ.ಐ.ಸಿ.ಸಿ ಕಾರ್ಯದರ್ಶಿಗಳಾದ ಸಂದೀಪ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ ಏ ಗಫೂರ್, ಪ್ರಸಾದ್‌ರಾಜ್ ಕಾಂಚನ್, ಪಕ್ಷದ ಮುಖಂಡರಾದ ದಿವಾಕರ್ ಕುಂದರ್, ಮುರಳಿ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಅಮೃತ್ ಶೆಣೈ, ಕುಶಲ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್‌ನ ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರ ಸತೀಶ್ ಕೊಡವೂರು ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ವಂದಿಸಿದರು.