ಮೈಸೂರು: ಇಂದು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಬಳಿಕ ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಾಂಪ್ರದಾಯಿಕ ದಸರಾ ಆಚರಣೆ ಕುರಿತು ಮಾತನಾಡಿದರು. ಬರಗಾಲದ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ದಸರಾ ಆಚರಿಸುತ್ತಿಲ್ಲ.
ಆದ್ರೆ ದಸರಾ ಮಹತ್ವಕ್ಕೆ ಯಾವುದೇ ಕುಂದು ಉಂಟಾಗದಂತೆ ಸಾಂಪ್ರದಾಯಿಕವಾಗಿ ನಾಡಹಬ್ಬವನ್ನು ಸರ್ಕಾರ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಂದುವರೆದು, ನಾವು ದಸರಾ ಹಬ್ಬವನ್ನು ನವರಾತ್ರಿ ಹಬ್ಬ ಎಂದು ಕರೆಯುತ್ತೇವೆ. 10ನೆಯ ದಿನ ಜಂಬೂ ಸವಾರಿ ನಡೆಯುತ್ತದೆ. ದಸರಾ ಹಬ್ಬ ವಿಜಯನಗರ ಸಾಮ್ರಾಜ್ಯದ ಆಚರಣೆಯಾಗಿತ್ತು. ವಿಜಯನಗರ ಸಾಮ್ರಾಜ್ಯ ವೈಭವಯುತವಾಗಿತ್ತು. ಈ ಸಾಮ್ರಾಜ್ಯದಲ್ಲಿ ಮುತ್ತು ರತ್ನಗಳನ್ನು ಸೇರು ಬಳ್ಳಗಳಲ್ಲಿ ಅಳೆದು ಮಾರಾಟ ಮಾಡುತ್ತಿದ್ದರು. ಮೈಸೂರು ಅರಸರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜರಾಗಿದ್ದರು. ವಿಜಯನಗರ ಸಾಮ್ರಾಜ್ಯದ ಪತನ ನಂತರ ಮೈಸೂರು ಅರಸರು ದಸರಾ ಹಬ್ಬವನ್ನು ಆಚರಣೆ ಮಾಡಲು ಪ್ರಾರಂಭಿಸಿದರು. ಈಗ ರಾಜ್ಯ ಸರ್ಕಾರ ಆಚರಣೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
ದಸರಾ ಆಚರಣೆಯ ಮೂಲಕ ಕನ್ನಡ ನಾಡಿನ ಭಾಷೆ, ಸಂಸ್ಕೃತಿ, ಅಭಿವೃದ್ಧಿ ಹಾಗೂ ಪರಂಪರೆಯನ್ನು ಜನರಿಗೆ ಸಾರುವ ಕೆಲಸ ಮಾಡುತ್ತದೆ. ಕನ್ನಡ ನಾಡಿನ ಸಮೃದ್ಧಿ, ವೈಭವವನ್ನು ವಿಶ್ವಕ್ಕೆ ಸಾರುವ ಕೆಲಸವನ್ನು ನಾವು ದಸರಾ ಮೂಲಕ ಮಾಡುತ್ತಿದ್ದೇವೆ. ನಮ್ಮ ನಾಡು ಸಮೃದ್ಧವಾಗಿದೆ. ಕರ್ನಾಟಕ ನಾಡಿನ ಜನ ಪ್ರೀತಿ ವಿಶ್ವಾಸ, ಸಹಕಾರ ಗೌರವದ ಗುಣಗಳನ್ನು ಬೆಳೆಸಿಕೊಂಡಿದ್ದಾರೆ. ಯಾವುದೇ ಜಾತಿ ಧರ್ಮಕ್ಕೆ ಸೇರಿದ್ದರೂ ಎಲ್ಲರೂ ಪ್ರೀತಿ ವಿಶ್ವಾಸದಿಂದ ಕಾಣಬೇಕು. ಸಂವಿಧಾನದ ಪೀಠಿಕೆಯಲ್ಲಿ ಕಾನೂನು ದೃಷ್ಟಿಯಿಂದ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಲಾಗಿದೆ ಎಂದರು
ನಾವು ಎಲ್ಲಾ ಜನರಿಗೆ ಸ್ಥಿರ ಆದಾಯವನ್ನು ಬರುವಂತೆ ಮಾಡಿಕೊಂಡುಕೊಳ್ಳುವ ಶಕ್ತಿ ಬರುವಂತೆ ಮಾಡಲು 5 ಗ್ಯಾರೆಂಟಿಗಳನ್ನು ಘೋಷಣೆ ಮಾಡಿ 4 ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದೇವೆ. 5ನೇಯ ಗ್ಯಾರೆಂಟಿಯನ್ನು ಮುಂದಿನ ಜನವರಿಯಲ್ಲಿ ಜಾರಿಗೆ ತರುತ್ತೇವೆ. ಮುಂಗಾರು ಮಳೆ ಕೊರತೆಯಿಂದ 42 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 30 ಸಾವಿರ ಕೋಟಿ ರೂಪಾಯಿಗಳ ಬೆಳೆ ನಷ್ಟ ಆಗಿದೆ.
ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ದಸರಾ ಹಬ್ಬಕ್ಕೆ ನಾದಬ್ರಹ್ಮ ಹಂಸಲೇಖ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮುಖ್ಯಮಂತ್ರಿ ಅವರು ಭಾಷಣ ಮಾಡಿದರು. ಈ ವೇಳೆ, ದುರಾದೃಷ್ಟವಶಾತ್ ಈ ಬಾರಿ ಮಳೆಯಾಗಲಿಲ್ಲ. ಬರಗಾಲ ಬಂದಿದೆ. ನಾನು ಮಹದೇವಪ್ಪನಿಗೆ ಹೇಳಿದೆ, ಈ ಸಾರಿ ನಾವು ದಸರಾವನ್ನು ನಿಲ್ಲಿಸಲು ಆಗುವುದಿಲ್ಲ. ಆದರೆ ಸಾಂಪ್ರದಾಯಿಕವಾಗಿ ದಸರಾವನ್ನು ಮಾಡಲೇಬೇಕು. ಯಾಕೆಂದರೆ ಜನರು ಕೂಡ ಅದನ್ನು ಅಪೇಕ್ಷೆ ಮಾಡುತ್ತಾರೆ. ನಾವು ಮಾಡಲೇಬೇಕಾಗುತ್ತದೆ. ಹೀಗಾಗಿ ನಾವು ದಸರಾವನ್ನು ಸಾಂಪ್ರದಾಯಿಕವಾಗಿ ಆಚರಿಸಬೇಕು. ಯಾವುದೇ ಕಾರಣಕ್ಕೆ ದಸರಾ ಮಹತ್ವ ಕಡಿಮೆಯಾಗಬಾರದೆಂದು ಮಾತುಗಳನ್ನು ಹೇಳಿದ್ದೆ ಎಂದರು
ಮಾನದಂಡಗಳ ಪ್ರಕಾರ 4850 ಕೋಟಿ ಬೆಳೆ ಹಾನಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. 116 ತಾಲ್ಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮುಂದಿನ ಹಿಂಗಾರು ಮಳೆ ಉತ್ತಮವಾಗಿ ಆಗಲಿ ಎಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥನೆ ಮಾಡಿದ್ದೇವೆ ಎಂದು ತಿಳಿಸಿದರು.
ನಾವು ಚುನಾವಣೆಗೆ ಮುಂಚೆ ನಾನು ಮತ್ತು ಮಾನ್ಯ ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರೆಂಟಿಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.
ಒಡೆಯರ ಆಡಳಿತ ಮೇಲೆ ಬೆಳಕು ಚೆಲ್ಲುವುದು ಮೈಸೂರು ದಸರಾ-ಸಚಿವ ಮಹದೇವಪ್ಪ: ಸಮಾಜ ಕಲ್ಯಾಣ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಮಾತನಾಡಿ, ವಿಜಯನಗರ ಸಾಮ್ರಾಜ್ಯದ ವೈಭವವನ್ನು ನೆನಪಿಸುತ್ತಾ, ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ ಆಡಳಿತ ಮೇಲೆ ಬೆಳಕು ಚೆಲ್ಲುವುದು ಮೈಸೂರು ದಸರಾ. ಮೈಸೂರು ದಸರಾ ನಾಡಿನ ಕಲೆ ಸಂಸ್ಕೃತಿ, ಪರಂಪರೆಯನ್ನು ತಿಳಿಸುತ್ತದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಜನಪರ ಆಡಳಿತ, ಕಾಳಜಿ, ಬದ್ಧತೆ ಮೈಸೂರು ದಸರಾದ ಪ್ರತೀಕ. ಮೈಸೂರಿನ ಜನರು ಶಾಂತಿಪ್ರಿಯರು ಎಂದರು.
ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ-ಡಿಸಿಎಂ: ಬಳಿಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿ ಮತ್ತು ಭಾಷೆಯನ್ನು ತಾಯಿಯ ಹೆಸರಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು. ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸಲು ಇಲ್ಲಿ ಬಂದಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಪಶು ಸಂಗೋಪನಾ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಚಿವರಾದ ಕೆ ಹೆಚ್ ಮುನಿಯಪ್ಪ, ಇಂಧನ ಇಲಾಖೆಯ ಸಚಿವರಾದ ಕೆ ಜೆ ಜಾರ್ಜ್, ಹಿಂದುಳಿದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಕೊಡಗು- ಮೈಸೂರು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಮೈಸೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಶಿವಕುಮಾರ್, ಶಾಸಕರಾದ ತನ್ವೀರ್ ಸೇಠ್, ಅನಿಲ್ ಕುಮಾರ್, ಶ್ರೀವತ್ಸ, ಜಿ ಡಿ ಹರೀಶ್ ಗೌಡ, ಡಿ ರವಿಶಂಕರ್, ಹರೀಶ್ ಗೌಡ, ದರ್ಶನ್ ದ್ರುವ ನಾರಾಯಣ್ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಿ ತಿಮ್ಮಯ್ಯ, ಉಪ ಮಹಾ ಪೌರರಾದ ಡಾ ರೂಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ಅವರು ಮಾತನಾಡಿ ವಿಜಯದಶಮಿ ವಿಜಯದ ಒಂದು ಸಂಕೇತ. ಎಲ್ಲಾ ಶಕ್ತಿಯನ್ನು ಹೊಂದಿರುವ ತಾಯಿ ಚಾಮುಂಡೇಶ್ವರಿ ರಾಕ್ಷಸರನ್ನು ಸಂಹಾರ ಮಾಡಿದಳು. ಇಂದು ನಮ್ಮಲ್ಲಿಯೇ ರಾಕ್ಷಸ ಗುಣಗಳು ಇವೆ. ಇವನ್ನು ಬಿಟ್ಟು ಎಲ್ಲರೂ ಶಾಂತಿ ಸೌಹಾರ್ದತೆ ಯಿಂದ ನಡೆದುಕೊಂಡು ಹೋಗಬೇಕು. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ದಸರಾಗೆ ಸೇರುತ್ತಾರೆ. 9 ದಿನಗಳ ಕಾಲ ನಡೆಯುವ ದಸರಾ ಆಚರಣೆಯಲ್ಲಿ ಎಲ್ಲರೂ ಭಾಗಿಗಳಾಗಿ ಎಂದರು.