ಉಡುಪಿ: ಜಿಲ್ಲೆಯಾದ್ಯಂತ ಮುಂಬರುವ ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಂದಿರುವ ಹಿನ್ನೆಲೆ, ಅಂತರ್ಜಲ ಮಟ್ಟವು ಶೇ. 24 ರಷ್ಟು ಕುಸಿದಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳು ಇವೆ. ಅಧಿಕಾರಿಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ ಕೈಗೊಳ್ಳುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ, ನೀರಿನ ಮಿತ ಬಳಕೆ ಮಾಡುವುದರೊಂದಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.
ಈಗಿನಿಂದಲೇ ಸ್ಥಳೀಯವಾಗಿ ನೀರಿನ ಲಭ್ಯತೆ, ಖಾಸಗಿ ಬೋರ್‌ವೆಲ್‌ಗಳಿಂದ ನೀರನ್ನು ಪಡೆದು, ವಿತರಿಸುವ ಬಗ್ಗೆ ನೀಲನಕ್ಷೆಯನ್ನು ತಯಾರಿಸಬೇಕು. ತೀರ ಅಗತ್ಯವಿದ್ದಲ್ಲಿ ಮಾತ್ರ ಟ್ಯಾಂಕರ್‌ಗಳ ಮೂಲಕ ನೀರನ್ನು ಸಾರ್ವಜನಿಕರಿಗೆ ನೀಡಬೇಕು. ಈ ಸಂಬಂಧ ಈಗಿನಿಂದಲೇ ಏಜೆನ್ಸಿಗಳನ್ನು ವಿವಿಧ ಷರತ್ತುಗಳನ್ನು ವಿಧಿಸುವುದರೊಂದಿಗೆ ಗುರುತಿಸಿ, ತಯಾರಿ ನಡೆಸಬೇಕು ಎಂದರು.
ಸಾರ್ವಜನಿಕರಿಗೆ ನೀರಿನ ಮಿತ ಬಳಕೆಯ ಬಗ್ಗೆ ಅರಿವು ಮೂಡಿಸಬೇಕು. ಹೊಸದಾಗಿ ಮನೆ ಹಾಗೂ ವಸತಿ ಸಮುಚ್ಚಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪರವಾನಿಗೆ ನೀಡುವಾಗ ಮಳೆ ನೀರಿನ ಕೊಯ್ಲನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಕಾರ್ಕಳ, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಇಲ್ಲಿನ ಬರ ಪರಿಸ್ಥಿತಿಗಳ ನಿರ್ವಹಣೆಗೆ ಸ್ಥಳೀಯ ಶಾಸಕರುಗಳನ್ನೊಳಗೊಂಡಂತೆ ತಹಶೀಲ್ದಾರರ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಪ್ರತೀ ಹದಿನೈದು ದಿನಗಳಿಗೊಮ್ಮೆ ಸಭೆ ಸೇರಿ ಬರ ನಿರ್ವಹಣೆ ಕುರಿತು ಯೋಜನೆ ರೂಪಿಸಿ, ಅನುಷ್ಠಾನಗೊಳಿಸಬೇಕು ಎಂದರು.
ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಜಾನುವಾರುಗಳ ಮೇವಿಗೆ ಕೊರತೆ ಉಂಟಾಗದಂತೆ ಸಹ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ರೈತರಿಗೆ ಮೇವಿನ ಕಿಟ್ಟನ್ನು ವಿತರಿಸಬೇಕು. ಗೋಶಾಲೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಅರಣ್ಯ ಇಲಾಖೆಯ ಜಮೀನುಗಳಲ್ಲಿ ಮೇವನ್ನು ಬೆಳೆಯಲು ಮುಂದಾಗಬೇಕು. ಜಿಲ್ಲೆಯಲ್ಲಿ ಉತ್ಪತ್ತಿಯಾಗಿರುವ ಮೇವನ್ನು ಹೊರ ಜಿಲ್ಲೆಗೆ ಹೋಗದಂತೆ ಚೆಕ್‌ಪೋಸ್ಟ್ಗಳಲ್ಲಿ ತಡೆಹಿಡಿಯಬೇಕು ಎಂದು ಸೂಚಿಸಿದರು.
ಜಿಲ್ಲೆಯ ಪ್ರತಿಯೊಂದು ಕಿಂಡಿ ಆಣೆಕಟ್ಟುಗಳಿಗೆ ತಡೆ ಹಲಗೆಗಳನ್ನು ಅಳವಡಿಸಬೇಕು ಜಿಲ್ಲೆಯಲ್ಲಿ ಒಟ್ಟು 603 ಕಿಂಡಿ ಆಣೆಕಟ್ಟುಗಳಲ್ಲಿ 210 ಕ್ಕೆ ಮಾತ್ರ ಹಲಗೆಗಳನ್ನು ಅಳವಡಿಸಲಾಗಿದೆ. ಈಗಾಗಲೇ ಹಿಂದಿನ ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ತಡೆ ಹಲಗೆಗಳನ್ನು ಅಳವಡಿಸಲು ಸೂಚನೆ ನೀಡಿದ್ದರೂ ಅಳವಡಿಸದೇ ಇರುವ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಅವರು, ಶೀಘ್ರದಲ್ಲಿಯೇ ಅಳವಡಿಸುವಂತೆ ಸೂಚನೆ ನೀಡಿದರು.
ಸಕಾಲ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಬೇಕು ಎಂದ ಅವರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಕೈಗೊಂಡ ಎಲ್ಲಾ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಕಡ್ಡಾಯವಾಗಿ ಪಾಲನೆ ಮಾಡಬೇಕು. ತಪ್ಪಿದ್ದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕಾನೂನು ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಪ್ರದೇಶಗಳ ಪಟ್ಟಿ ತಯಾರಿಸಿ, ಮುಂದಿನ ದಿನಗಳಲ್ಲಿ ಆ ಸ್ಥಳಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರದಂತೆ ಕ್ರಮ ವಹಿಸಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ತಾತ್ಕಾಲಿಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ವಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದರು.
ಸಭೆಯಲ್ಲಿ ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪೌರಾಯುಕ್ತ ರಾಯಪ್ಪ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.