ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಕಾರ್ಯಕ್ರಮವು ಡಿ.14 ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಿ.14ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ಬಾರಿಯ ವಿರಾಸತ್ ನಲ್ಲಿ ಬೆನ್ನಿದಯಾಲ್, ವಿಜಯಪ್ರಕಾಶ್, ಶ್ರೇಯಾ ಘೋಷಾಲ್ ಸ್ವರ ಮಾಧುರ್ಯ, ಪ್ರತಿನಿತ್ಯ 13 ಗಂಟೆಗಳ ಕಾಲ 750 ಮಳಿಗೆಗಳಲ್ಲಿ ಪ್ರದರ್ಶನ ಹಾಗೂ ಮಾರಾಟಗಳು ನಡೆಯಲಿವೆ. ಭವ್ಯ ಸಾಂಸ್ಕೃತಿಕ ಮೆರವಣಿಗೆ ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪದರ್ಶನ ಮೇಳ, ಚಿತ್ರಕಲಾ ಮೇಳ ಹಾಗೂ ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಅಲ್ಲದೆ, ಸ್ಕೌಟ್ಸ್ ಮತ್ತು ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.