ಮಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಗಾಯಗೊಂಡ ಘಟನೆ ಮಂಗಳೂರಿನ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಶುಕ್ರವಾರ ನಡೆದಿದೆ. ರೀಗಲ್ ಪ್ಲಾಝಾ ಎಂಬ ವಾಣಿಜ್ಯ ಸಂಕೀರ್ಣದಲ್ಲಿರುವ ಹೋಟೆಲ್ ವೊಂದರಲ್ಲಿ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಹೋಟೆಲ್ ಅಡುಗೆ ಸಿಬ್ಬಂದಿ ಅಶ್ರಫ್ ಎಂಬುವವರು ಗಾಯಗೊಂಡಿದ್ದಾರೆ. ಬೆಳಗ್ಗೆ ಹೋಟೆಲ್ ತೆರೆದು ಅಡುಗೆ ಮಾಡಲು ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕದ್ರಿ ಹಾಗೂ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ. ಮಂಗಳೂರು ದಕ್ಷಿಣ, ಬಂದರ್ ಪೊಲೀಸರೂ ಕೂಡಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.