15ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ: ಪ್ರವಾಸೋದ್ಯಮ, ಕೃಷಿ ಮಹಿಳೆಯರ ಸಬಲೀಕರಣ, ಶಿಕ್ಷಣ, ಆರೋಗ್ಯ; ಯಾವ ಇಲಾಖೆಗೆ ಎಷ್ಟು ಅನುದಾನ?

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.

15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಸತತ 3 ಗಂಟೆ 15 ನಿಮಿಷ ಬಜೆಟ್ ಪ್ರತಿಯನ್ನು ಓದಿ ಮುಕ್ತಾಯಗೊಳಿಸಿದ್ದಾರೆ.

ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.

ನಮ್ಮ ಮಿಲೆಟ್‌ ಯೋಜನೆ ಘೋಷಣೆ

ರಾಜ್ಯ ಸರ್ಕಾರವು ಸಿರಿಧಾನ್ಯಗಳ ಉತ್ಪಾದನೆಗೆ ಹೊಸ ಯೋಜನೆ ಘೋಷಣೆ ಮಾಡಿದೆ. ಬಜೆಟ್‌ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮಿಲೆಟ್‌ ಯೋಜನೆ ಘೋಷಣೆ ಮಾಡಿದ್ದಾರೆ.

ಕನ್ನಡ ಅನುವಾದಕ್ಕೆ ಸಾಫ್ಟ್ ವೇರ್

ಕನ್ನಡ ಭಾಷೆಗೆ ಭಾಷಾಂತರವನ್ನು ಸುಲಭಗೊಳಿಸಲು ಕನ್ನಡ ಕಸ್ತೂರಿ ಎಂಬ ಅನುವಾದ ಸಾಫ್ಟ್‌ವೇರ್ ಅನ್ನು ರಚಿಸಲಾಗುವುದು, ಭಾಷೆಯ ಅಡೆತಡೆಗಳನ್ನು ನಿವಾರಿಸುವ ಮೂಲಕ ಕನ್ನಡಿಗರಿಗೆ ಮತ್ತು ಕನ್ನಡೇತರರಿಗೆ ಅನುಕೂಲವಾಗುತ್ತದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.

2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ.

ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.

ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.

ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.

ಆರೋಗ್ಯ ಕ್ಷೇತ್ರ

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೊಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದೊಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸುವುದಾಗಿ ಇಂದಿನ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್‌ ಮ್ಯಾಮೊಗ್ರಫಿ ಯಂತ್ರಗಳ ಅಳವಡಿಕೆ, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಉಡುಪಿ, ಕೋಲಾರ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪಸ್ಕೊಪಿ ಉಪಕರಣಗಳ ಖರೀದಿ 21 ಕೋಟಿ ರೂಪಾಯಿ ಅನುದಾನ.

ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಹಬ್‌ ಅಂಡ್‌ ಸ್ಪೋಕ್‌ ಮಾದರಿಯಲ್ಲಿ ವಿಸ್ತರಿಸುವ ಮೂಲಕ ಸ್ಟೆಮಿ (STEMI- ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸಲಾಗುವುದು. ಇದಲ್ಲದೇ ಸ್ಟೆಮಿ ಹಾಗೂ ಸ್ಟ್ರೋಕ್‌ ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂಪಾಯಿಗಳನ್ನು ಘೋಷಿಸಲಾಗಿದೆ.

ನೀರಾವರಿಗೆ ಸಿಎಂ ಕೊಡುಗೆ

ಮೇಕೆದಾಟು ಯೋಜನೆ ಶೀಘ್ರವೇ ಜಾರಿಗೆ ಕ್ರಮ
ಎತ್ತಿನಹೊಳೆ ಯೋಜನೆಯ ಎಲ್ಲ ಲಿಫ್ಟ್‌ ಕಾಮಗಾರಿ ಪೂರ್ಣಗೊಳಿಸಲು ತೀರ್ಮಾನ
ಕಳಸಾ-ಬಂಡೂರಿ ಯೋಜನೆ ಜಾರಿಯ ಅಡೆತಡೆ ನಿವಾರಣೆ

ಶಿಕ್ಷಣ ಕ್ಷೇತ್ರ

ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ಕರೆಂಟ್ ನೀಡಲಾಗುವುದು.

ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ, ಫ್ರೀ ಕರೆಂಟ್​ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಮಹಿಳಾ ಪಾಲಿಟೆಕ್ನಿಕ್​​ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು ಇಡಲಾಗುವುದು. ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ಶೋಧನಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಅಲ್ಲದೆ ಡೀಪ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸು, ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದಾರೆ.

7.50 ಕೋಟಿ ರೂ. ವೆಚ್ಚದಲ್ಲಿ ಕೆಫೆ ಸಂಜೀವಿನಿ ಹೆಸರಿನ 50 ಮಹಿಳಾ ಕೆಫೆಗಳನ್ನು ಈ ವರ್ಷದಲ್ಲಿ ರಾಜ್ಯಾದ್ಯಂತ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದು, ಈ ಕ್ಯಾಂಟೀನ್‌ಗಳು ಗ್ರಾಮೀಣ ಪ್ರದೇಶಗಳಲ್ಲಿನ ಬೇಡಿಕೆ ಮತ್ತು ಪೂರೈಕೆಯ ಕೊರತೆಯನ್ನು ನೀಗಿಸಲಿದ್ದು, ಆರೋಗ್ಯಕರ, ಆರೋಗ್ಯಕರ ಮತ್ತು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಬೇಯಿಸಿದ ಆಹಾರ ಮತ್ತು ಸಾಂಪ್ರದಾಯಿಕ ಸ್ಥಳೀಯ ಪಾಕಪದ್ಧತಿಯನ್ನು ಪರಿಚಯಿಸಲಿದೆ.

ಮೀನುಗಾರಿಕಾ ಸಂಶೋಧನಾ ಕೇಂದ್ರ ಸ್ಥಾಪನೆ

ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ

ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಣೆ ಮಾಡಲಾಗಿದೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ

2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿಎಸ್’ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗೆ 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿದೆ ಎಂದಿದ್ದಾರೆ.

ರಾಜ್ಯದ 3 ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಕೃಷಿ ಕ್ಷೇತ್ರ

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು ಎಂದಿದ್ದಾರೆ.

ರಾಜ್ಯದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಮತ್ತು ಹೂಡಿಕೆದಾರರನ್ನು ಆಕರ್ಷಿಸಲು 2024-29ಕ್ಕೆ ಪ್ರವಾಸೋದ್ಯಮ ನೀತಿಯನ್ನು ಪರಿಷ್ಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಲ್ಲದೆ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿವೆ. ಇವುಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದ್ದಾರೆ.