ಉಡುಪಿ: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜ಼ಿಂದಾಬಾದ್’ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಗಿರಿ ಸರ್ಕಲ್ ಬಳಿ ಇರುವ ಕಚೇರಿಗೆ ಬಿಜೆಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಆದರೆ ಕಾರ್ಯಕರ್ತರನ್ನು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪೊಲೀಸರು ತಡೆದಿದ್ದಾರೆ. ಬ್ಯಾರಿಕೇಡ್ ಅಳವಡಿಸುವ ಮೂಲಕ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಬಿಜೆಪಿಯ ಪ್ರಮುಖ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಶಾಸಕ ಯಶ್ ಪಾಲ್ ಸುವರ್ಣ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ರಾಜೇಶ್ ಕಾವೇರಿ, ಸತೀಶ್ ಶೆಟ್ಟಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.