ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿದ್ದ ಅಪರಾಧ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಪ್ರಕರಣ ರದ್ದುಗೊಳಿಸುವಂತೆ ಕೋರಿ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
2018ರ ಏಪ್ರಿಲ್ 6 ರಂದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆಯದೆ ಬಂಟ್ವಾಳದ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದಲ್ಲಿ ಸಭೆ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು.
ಪ್ರಭಾಕರ ಭಟ್ ಪರ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಐಪಿಸಿ 153 (ಎ) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸುವ ಮುನ್ನ ರಾಜ್ಯ, ಅಥವಾ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಆದರೆ, ದೂರುದಾರರು ಈ ನಿಯಮ ಪಾಲಿಸಿಲ್ಲ. ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ಸಾಕ್ಷ್ಯಾಧಾರ ನೀಡಿಲ್ಲ. ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಅರ್ಜಿದಾರರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಹುನ್ನಾರವಾಗಿದೆ. ಆದ್ದರಿಂದ ಪ್ರಕರಣ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು. ಈ ವಾದವನ್ನು ನ್ಯಾಯಪೀಠ ಪುರಸ್ಕರಿಸಿತು.