ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಂದೆಯ ಆರೋಗ್ಯ ಗಂಭೀರವಾಗಿತ್ತು. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದೆವು. ವೈದ್ಯರು ಅವರನ್ನು ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನು ಅಗಲಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಿಧಿವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀನಿವಾಸ ಪ್ರಸಾದ್ ಪುತ್ರಿ ಪೂರ್ಣಿಮಾ ಪ್ರಸಾದ್ ಹೇಳಿದ್ದಾರೆ.
ಸ್ವಾಭಿಮಾನಕ್ಕೆ ಹೆಸರಾಗಿದ್ದ ಶ್ರೀನಿವಾಸ ಪ್ರಸಾದ್ ಕಳೆದ ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದರು.
2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ರಾಜಕೀಯ ಗಣ್ಯರು, ಕುಟುಂಬದವರು, ಅಭಿಮಾನಿಗಳು ಭಾವಪೂರ್ಣ ವಿದಾಯ ಹೇಳುತ್ತಿದ್ದಾರೆ.