ದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಕುರಿತು ತಿಳಿಸಿ ಸಂಕಷ್ಟ ಸೂತ್ರ ಪರಿಹಾರ ರೂಪಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಕರ್ನಾಟಕದ ಸಿಎಂ ಸಿದ್ದರಾಮಯ್ಯ ನೇತೃತ್ವದ ತಂಡ ಮನವಿ ಸಲ್ಲಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಇನ್ನೂ ಸಮಯ ನಿಗದಿಯಾಗಿಲ್ಲ ಎಂದು ವರದಿಯಾಗಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ತಂಡ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿ ಕಾವೇರಿ ಜಲವಿವಾದದ ಕುರಿತು ಚರ್ಚಿಸಿತು.
ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ರಾಜ್ಯದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.