ಅಭ್ಯರ್ಥಿಗಳ ಹೆಸರು ಅಳವಡಿಸುವ ಕಾರ್ಯ ಆರಂಭ: ಜಿಲ್ಲಾಧಿಕಾರಿ

ಏಪ್ರಿಲ್ 18 ರಂದು ನಡೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಇವಿಎಂ ಮತ್ತು ವಿವಿ ಪ್ಯಾಟ್ ಗಳಲ್ಲಿ ಅಳವಡಿಸುವ ಕಾರ್ಯ ಇಂದಿನಿಂದ ಆರಂಭಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಉಡುಪಿ ಜಿಲ್ಲೆಯ ಕಾಪು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಇವಿಎಂ ಮತ್ತು ವಿವಿ ಪ್ಯಾಟ್ ಗಳಲ್ಲಿ  ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಅಳವಡಿಸುವ ಕಾರ್ಯ ಆರಂಭಗೊಂಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ್ತು ಅವರ ಪ್ರತಿನಿಧಿಗಳು ಸಮ್ಮುಖದಲ್ಲಿ ಈ ಕಾರ್ಯ ನಡೆಯುತ್ತಿದ್ದು, ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಬಿ.ಇ.ಎಲ್ ನ ಇಂಜಿನಿಯರ್ ಗಳು , ಸಹಾಯಕ ಚುನಾವಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಈ ಕಾರ್ಯ ಮಾಡುತ್ತಿದ್ದಾರೆ ಎಂದು ಡಿಸಿ ಹೇಳಿದರು.

ಚುನಾವಣೆಗೆ ಸಂಬಂದಿಸಿದಂತೆ, 956 ಮತಗಟ್ಟೆ ಅಧಿಕಾರಿ, 956 ಸಹಾಯಕ ಮತಗಟ್ಟೆ ಅಧಿಕಾರಿ, 1912 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಈಗಾಗಲೇ 2 ಹಂತದ ತರಬೇತಿಯನ್ನು ನೀಡಲಾಗಿದೆ. 250 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಿದ್ದು, ಅವರಿಗೆ ಏಪ್ರಿಲ್ 10 ರಂದು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಡಿಸಿ ತಿಳಿಸಿದರು.