ಕರಾವಳಿಯಲ್ಲಿ ಯಾವುದೇ ಬೆಲೆ ತೆತ್ತಾದರೂ ಕೋಮು ಸೌಹಾರ್ದತೆ ಉಳಿಸಲು ಕ್ರಮ: ಜಿ. ಪರಮೇಶ್ವರ್

ಉಡುಪಿ: ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮತ್ತು ಕೋಮುವಾದವನ್ನು ಪ್ರಚೋದಿಸುವ ನೈತಿಕ ಪೊಲೀಸ್‌ಗಿರಿಯನ್ನು ಹತ್ತಿಕ್ಕಲು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಮ್ಮ ಸರಕಾರ ಸರ್ವಜನಾಂಗದ ಶಾಂತಿಯ ತೋಟದ ಪರಿಕಲ್ಪನೆಯೊಂದಿಗೆ ಆಡಳಿತ ನಡೆಸಲು ತೀರ್ಮಾನ ಮಾಡಿದೆ. ಆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಬೆಲೆ ತೆತ್ತಾದರು ಕೋಮು ಸೌಹಾರ್ದತೆ ಉಳಿಸಲು ಮುಂದಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಉಡುಪಿ ಎಸ್ಪಿ ಕಚೇರಿಯಲ್ಲಿ ಉನ್ನತ ಮಟ್ಟದ ಪೊಲೀಸ್‌ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂತಹ ಘಟನೆಗಳಲ್ಲಿ ಅಮಾಯಕ ವಿದ್ಯಾರ್ಥಿಗಳು ಮತ್ತು ಯುವಕರು ಬಲಿಪಶುಗಳಾಗುತ್ತಿದ್ದಾರೆ. ಇನ್ನು ಮುಂದೆ ಈ ರೀತಿ ಆಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

ಮಾದಕ ದ್ರವ್ಯ ನಿಗ್ರಹ

ಕರಾವಳಿ ಪ್ರದೇಶದಲ್ಲಿ ಮಾದಕ ವಸ್ತುಗಳ ದಂಧೆ ವ್ಯಾಪಕವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ವಿದ್ಯಾರ್ಥಿಗಳು ಮತ್ತು ಮಾನಸಿಕವಾಗಿ ದುರ್ಬಲರಾಗಿರುವವರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಸರಬರಾಜು ಮಾಡಲಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆ ಹಾಗೂ ಜುಗಾರಿ ವಿರುದ್ಧ ಕ್ರಮಕ್ಕೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಮಾತ್ರವಲ್ಲದೆ ಇಂತಹ ಘಟನೆಗಳು ನಡೆದರೆ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಮತ್ತು ವಿಭಾಗ ವ್ಯಾಪ್ತಿಯ ಡಿವೈಎಸ್ಪಿ ಮತ್ತು ಜಿಲ್ಲೆಯ ಎಸ್ಸಿ ಅಥವಾ ಹಿರಿಯ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದರು.

ಸೈಬರ್ ಕ್ರೈಂ ನಿಗ್ರಹ

ರಾಜ್ಯದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದ್ದು ಸಿಬ್ಬಂದಿಗಳಿಗೆ ತರಬೇತಿ ನೀಡಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಅದೇ ರೀತಿ ಇಂತಹ ವಂಚನೆಗಳು ನಡೆದಾಗ 24 ಗಂಟೆಗಳ ಒಳಗಿನ ಗೋಲ್ಡನ್ ಅವಧಿಯಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರೆ ಕ್ರಮ ತೆಗದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಇಲಾಖೆಯ ಖಾಲಿ ಹುದ್ದೆ ಭರ್ತಿಗೆ ಕ್ರಮ

ಪ್ರತಿವರ್ಷ ಪೊಲೀಸ್‌ ಇಲಾಖೆಯಲ್ಲಿ 3000 ಮಂದಿ ನಿವೃತ್ತರಾಗುತ್ತಿದ್ದಾರೆ. ಇದರಿಂದ ಬಹಳ ಹುದ್ದೆಗಳು ಖಾಲಿಯಾಗಿವೆ. ಅವನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಂಡು, ಮುಂದೆ ಹಂತಹಂತವಾಗಿ 50000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಸಿಬ್ಬಂದಿಗಳ ನೇರ ನೇಮಕಾತಿಯು ಎರಡು ವರ್ಷಗಳಿಂದ ಬಾಕಿ ಇದೆ. ನೇಮಕಾತಿ ಹಗರಣದಲ್ಲಿ ಯಾವುದೇ ತಪ್ಪು ಮಾಡದವರು ನ್ಯಾಯಕ್ಕಾಗಿ ಕೋರ್ಟ್ ಮೋರೆ ಹೋಗಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಕೋರ್ಟ್ ನಿಂದ ತಡೆಯಾಜ್ಞೆ ಇದ್ದು ಅದು ತೆರವಾದ ಬಳಿಕ ಕಾನೂನು ಸಲಹೆ ಪಡೆದು ಸರಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಗಳೂರು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತ, ನಕ್ಸಲ್ ನಿಗ್ರಹ ಪಡೆಯ ಪೊಲೀಸ್‌ ಅಧೀಕ್ಷಕ ನಿಕಮ್ ಪ್ರಕಾಶ್ ಅಮ್ರಿತ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೇ ಅಕ್ಷಯ್‌ ಮಚ್ಚೀಂದ್ರ ಉಪಸ್ಥಿತರಿದ್ದರು.