ಚುರುಕುಗೊಂಡ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರ ವರೆಗೆ ಭಾರಿ ಮಳೆ

ಉಡುಪಿಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ಉತ್ತಮ ಮಳೆಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಬಿರುಸಿನ ಮಳೆ ಸುರಿಯಿತು. ಶನಿವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಕಾರ್ಕಳ ತಾಲ್ಲೂಕಿನ ವಿವಿಧೆಡೆ ಹಾನಿಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ, ಗೋಕರ್ಣ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ, ದಾಂಡೇಲಿ, ಯಲ್ಲಾಪುರ, ಸಿದ್ದಾಪುರ ಕಡೆ ಉತ್ತಮ ಮಳೆಯಾಯಿತು.

17ರವರೆಗೆ ಭಾರಿ ಮಳೆ ಸಾಧ್ಯತೆ:
ಮುಂಗಾರು ಹಾಗೂ ಪೂರ್ವ ಅರಬ್ಬಿ ಸಮುದ್ರ–ಬಂಗಾಳ ಉಪಸಾಗರಗಳಲ್ಲಿ ವಾಯುಭಾರ ಕುಸಿತ ಮತ್ತು ಮೇಲ್ಮೈಸುಳಿಗಾಳಿ ಉಂಟಾಗಿದ್ದು, ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂ.13ರಿಂದ 17ರವರೆಗೆ ಧಾರಾಕಾರ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಇದೇ 17ರವರೆಗೆ ‘ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಎಚ್ಚರಿಕೆ ನೀಡಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌‘ ಘೋಷಿಸಲಾಗಿದೆ.