ಪೌರಕಾರ್ಮಿಕರ ಮೇಲೆ ಹಲ್ಲೆ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಿಂದ ಕ್ಷಮೆಯಾಚನೆ

ಉಡುಪಿ: ನನ್ನ ಅಸ್ಮಾ ಎಲೆಕ್ಟ್ರಾನಿಕ್ಸ್ ಅಂಗಡಿಯ ಉದ್ಯೋಗಿಯೊಬ್ಬರು ಶುಕ್ರವಾರ ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ನಾನು ಬಹಿರಂಗವಾಗಿ ಕ್ಷಮೆಯಾಚಿಸುತ್ತೇನೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷರು ಆಗಿರುವ ಅಸ್ಮಾ ಎಲೆಕ್ಟ್ರಾನಿಕ್ಸ್ ಅಂಗಡಿಯ ಮಾಲೀಕ ದಾವೂದ್ ಅಬೂಬಕರ್ ಹೇಳಿದ್ದಾರೆ.

ನಾನು ದೇಶದ ಕಾನೂನನ್ನು ಗೌರವಿಸುವವನಾಗಿದ್ದು, ಯಾವುದೇ ವ್ಯಕ್ತಿಯು ಕೂಡ ಕಾನೂನನ್ನು ಕೈಗೆತ್ತಿಕೊಳ್ಳುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ಹಾಗಾಗಿ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.