ಉಡುಪಿ: ಏಡ್ಸ್ ಸೋಂಕು ತಡೆಗಟ್ಟಲು, ಸೋಂಕು ಹರಡುವಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಅವರು ಇಂದು ನಗರದ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ, ನಾಗರಿಕ ಸಹಾಯವಾಣಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಉದ್ಭವ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಬೆಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ಹೆಚ್.ಐ.ವಿ ಸೋಂಕಿನ ತಡೆಗಾಗಿ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ ಎಂಬ ಘೋಷ ವಾಕ್ಯದೊಂದಿಗೆ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯು ಏಡ್ಸ್ ಸೋಂಕು ನಿಯಂತ್ರಣದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದೆ. ಎಚ್.ಐ.ವಿ ಸೋಂಕಿನ ಬಗ್ಗೆ ಜನಸಾಮಾನ್ಯರಲ್ಲಿ ಆರೋಗ್ಯದ ತಿಳುವಳಿಕೆ ಮತ್ತು ಕೊರತೆ ಇದ್ದು, ಸಾರ್ವಜನಿಕರಲ್ಲಿ ಏಡ್ಸ್ ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಿಸಿ, ಏಡ್ಸ್ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಬೇಕು ಎಂದರು.
ಎಚ್.ಐ.ವಿ ಬಾಧಿತರನ್ನು ಯಾವುದೇ ತಾರತಮ್ಯ ಮಾಡದೇ ಗೌರವದಿಂದ ಕಾಣಬೇಕು. ಎಚ್.ಐ.ವಿ ಬಾಧಿತರಿಗೆ ಸರಕಾರದಿಂದ ಹಲವಾರು ಸೌಲಭ್ಯಗಳು ದೊರೆಯುತ್ತಿದ್ದು, ಇದರ ಬಗ್ಗೆ ತಿಳುವಳಿಕೆ ನೀಡಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಾ.ಪ್ರಶಾಂತ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ ಸ್ವಾಗತಿಸಿದರು, ಮೇಲ್ವಿಚಾರಕ ಮಹಾಬಲೇಶ್ವರ ಎನ್. ವಂದಿಸಿದರು.