ಯಕ್ಷ”ಗಾನ” ನಿಲ್ಲಿಸಿದ ಕರಾವಳಿ ಕೋಗಿಲೆ: ಬಡಗುತಿಟ್ಟಿನ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಉಡುಪಿ: ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಹಾಗೂ ಪ್ರಸಿದ್ಧ ಭಾಗವತರೂ ಆದ ‘ಕರಾವಳಿ ಕೋಗಿಲೆ’ ಎಂದೇ ಹೇಳಲಾಗುವ ಸುಬ್ರಹ್ಮಣ್ಯ ಧಾರೇಶ್ವರ (ಜನನ 1957, ಸೆ.5) ತನ್ನ 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಏ.25ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

ಯಕ್ಷ ರಂಗದ ತಜ್ಞ ಭಾಗವತರೆಂದೇ ಗುರುತಿಸಲ್ಪಡುತ್ತಿದ್ದ ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕೋಟ ‘ಅಮೃತೇಶ್ವರಿ ಮೇಳ’ ಶ್ರೀ ಪೆರ್ಡೂರು ಮೇಳದಲ್ಲಿ ಭಾಗವತರಾಗಿ, ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿದವರು.ಸುಮಾರು 400ಕ್ಕಿಂತಲೂ ಅಧಿಕ ಯಕ್ಷಗಾನದ ಆಡಿಯೋ ಕ್ಯಾಸೆಟ್ ಗಳಲ್ಲಿ ಧಾರೇಶ್ವರರ ಧ್ವನಿ ಇದೆ.

ಕರ್ನಾಟಕ ರಾಜ್ಯೋತ್ಸವ ರಾಜ್ಯಮಟ್ಟದ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಬಿರುದು, ಸನ್ಮಾನಗಳಿಗೆ ಪಾತ್ರರಾಗಿರುವ ಧಾರೇಶ್ವರ ಅವರು ಸುಮಾರು ನಾಲ್ಕು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಭಾಗವತರಾಗಿ ತೊಡಗಿಸಿಕೊಂಡಿದ್ದಾರೆ. ಗುರುಗಳಾದ ನಾರಾಯಣಪ್ಪ ಉಪ್ಪೂರರನ್ನು ಸದಾ ಸ್ಮರಿಸುತ್ತಿದ್ದ ಅವರು, ಸಾಧನೆಯ ಮೂಲಕ ಎತ್ತರಕ್ಕೇರಿದವರು. ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ತಂದು ಪೌರಾಣಿಕ ಹಾಗೂ ಸಾಮಾಜಿಕ ಪ್ರಸಂಗಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಧಾರೇಶ್ವರರು, ಕಾಳಿಂಗ ನಾವಡರರ ನಂತರ ಯಕ್ಷಗಾನ ರಂಗದಲ್ಲಿ ತನ್ನ ಇಂಪಾದ ಕಂಠದಿಂದ ಜನಪ್ರಿಯರಾದವರು.

ಮೂಲತಃ ಎಲೆಕ್ಟ್ರಿಕಲ್ ಅಂಗಡಿ ಮಾಡಿಕೊಂಡಿದ್ದ ಸುಬ್ರಹ್ಮಣ್ಯ ಧಾರೇಶ್ವರ ಕೋಟದಲ್ಲಿ ಯಕ್ಷಗಾನ ಕೇಂದ್ರಕ್ಕೆ ಸೇರಿ ಅಲ್ಲಿ ಭಾಗವತಿಕೆಯ ಮಟ್ಟುಗಳನ್ನು ಕಲಿತರು. ಉಪ್ಪೂರರಿಂದ ಭಾಗವತಿಕೆಯ ಎಲ್ಲ ಪಟ್ಟುಗಳನ್ನು ಕಲಿತರು. ಆರಂಭದಲ್ಲಿ ಎಲೆಕ್ಟ್ರಿಶಿಯನ್ ಆಗಿ ಅಮೃತೇಶ್ವರಿ ಮೇಳಕ್ಕೆ ಸೇರಿದರು. ಈ ಸಂದರ್ಭ ಗುರುಗಳಾದ ಉಪ್ಪೂರರ ಒತ್ತಾಸೆಯಿಂದ ಭಾಗವತಿಕೆ ಮಾಡಲು ಆರಂಭಿಸಿದರು. ಪೀಠಿಕೆ ಸ್ತ್ರೀವೇಷದವರೆಗೆ ಪದ್ಯ ಹೇಳಿ, ಎಲೆಕ್ಟ್ರಿಶಿಯನ್ ಆಗಿ, ಹಗಲು ಮೈಕ್ ಜಾಹೀರಾತು ನೀಡುವ ಕೆಲಸವನ್ನು ಮಾಡುತ್ತಿದ್ದ ಧಾರೇಶ್ವರರು, ಬಳಿಕ ಭಾಗವತಿಕೆಯಲ್ಲೇ ತೊಡಗಿಸಿಕೊಂಡು ಜನಪ್ರಿಯರಾದರು. ಪೆರ್ಡೂರು ಮೇಳದಲ್ಲಿ ಸುಮಾರು 26ಕ್ಕೂ ಅಧಿಕ ವರ್ಷಗಳ ತಿರುಗಾಟ ಸಹಿತ ಧಾರೇಶ್ವರ ಚಾರಿಟೇಬಲ್ ಟ್ರಸ್ಟ್ ಮೂಲಕ ಯಕ್ಷಗಾನ ಸೇವೆ ಮಾಡಿದ್ದಾರೆ.