ಬೆಂಗಳೂರು: ರಾಜ್ಯದಲ್ಲಿ ಮದುವೆ, ಗಣೇಶ ಉತ್ಸವ ಹಾಗೂ ರಾಜಕೀಯ ಸಂಬಂಧಿತ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅತ್ತಿಬೆಲೆ ಪಟಾಕಿ ಮಳಿಗೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಹಸಿರು ಪಟಾಕಿ ನಿಯಾಮವಳಿಗಳಿಗೆ ವಿರುದ್ಧವಾಗಿ ಅಂಗಡಿಗಳು ಇದ್ದರೆ ಕ್ರಮ ಕೈಗೊಳ್ಳಬೇಕು. ಅನಧಿಕೃತ ಮಳಿಗೆಗಳು ಕಂಡುಬಂದಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಪಟಾಕಿ ಅಂಗಡಿಗಳಿಗೆ ಪರವಾನಗಿನೀಡುವಂತೆ ಸೂಚಿಸಲಾಗಿದೆ ಎಂದರು.
ರಾಜಕೀಯ, ಮದುವೆ ಕಾರ್ಯಕ್ರಮ ಹಾಗೂ ಗಣೇಶ ಉತ್ಸವ ಸೇರಿದಂತೆ ವಿವಿಧ ಸಂಭ್ರಮಾಚರಣೆಗಳ ವೇಳೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುತ್ತಿದೆ. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಪಟಾಕಿ ಮಾರಾಟ ಹಾಗೂ ಸಂಗ್ರಹಣೆ ಪರವಾನಗಿ ಪರಿಷ್ಕರಿಣೆ ಮಾಡಲು ಸೂಚನೆ ನೀಡಲಾಗಿದೆ. ಪ್ರಸ್ತುತ 5 ವರ್ಷಗಳವರೆಗೆ ಇದ್ದ ಪರವಾನಗಿ ಅವಧಿಯನ್ನು1 ವರ್ಷಕ್ಕೆ ತಗ್ಗಿಸಿ ಪರಿಷ್ಕೃರಣೆ ಮಾಡಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಪರಿಷ್ಕರಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು-ಸುವ್ಯವಸ್ಥೆ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ. ಪ್ರತಿ 5 ವರ್ಷಕ್ಕೊಮ್ಮೆ ನೀಡಲಾಗುತ್ತಿದ್ದು ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.
ಲೈಸನ್ಸ್ ನೀಡುವಾಗ ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿ ಪರಿಶೀಲಿಸಬೇಕು. ಅಲ್ಲಿರುವ ಎಲ್ಲ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಬೇಕು. ಲೈಸನ್ಸ್ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದ ಅವರು ಅತ್ತಿಬೆಲೆ ಪಟಾಕಿ ಮಳಿಗೆ ಪ್ರಕರಣದಲ್ಲಿ ತಪ್ಪಿತಸ್ಥರಾದ ಎಲ್ಲರ ಅಮಾನತಿಗೆ ಸೂಚಿಸಲಾಗಿದೆ ಎಂದರು.












