ಅಪ್ರಾಪ್ತರಿಗೆ ಸಾಮಾಜಿಕ ಜಾಲತಾಣ ಖಾತೆ ನಿರ್ಬಂಧ? ನಿಯಮ ತಿದ್ದುಪಡಿಗೆ ಕೇಂದ್ರದ ಚಿಂತನೆ

ನವದೆಹಲಿ: 18 ವರ್ಷದೊಳಗಿನ ಅಪ್ರಾಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯುವುದನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ಈ ಸಂಬಂಧ ಶಾಸನಬದ್ಧ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನೊಳಗೊಂಡ ಪೀಠವು ‘ಜಸ್ಟ್ ರೈಟ್ಸ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಡಿಜಿಟಲ್ ಪರಿಸರದಲ್ಲಿ ಮಕ್ಕಳು ಎದುರಿಸುತ್ತಿರುವ ಅಪಾಯಗಳನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಒಪ್ಪಿಕೊಂಡರು. ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಅಪ್ರಾಪ್ತರು ನೋಂದಾಯಿಸಿಕೊಳ್ಳುವುದನ್ನು ತಡೆಯುವ ಕ್ರಮಗಳನ್ನು ಮಧ್ಯವರ್ತಿಗಳಿಗೆ ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಸಹಮತ ವ್ಯಕ್ತಪಡಿಸಿದೆ.

ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಮತ್ತಷ್ಟು ಬಲಪಡಿಸಲು ಹೊಸ ಶಾಸನಬದ್ಧ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದ್ದು, ಈ ಕುರಿತು ಕೇಂದ್ರ ಸರ್ಕಾರ ಪರಿಶೀಲನೆ ನಡೆಸಲಿದೆ.