ರಾಜ್ಯಾದ್ಯಂತ ಮಳೆ; ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.!

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತಿಂಗಳಾಂತ್ಯದವರೆಗೆ ಮುಂದುವರೆಯಲಿದೆ. ಕರಾವಳಿಯ ಮೂರು ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ.

ಭಾರಿ ಗಾಳಿ, ಮಳೆ ಬೀಸುವ ಸಾಧ್ಯತೆ:
ಭಾರತೀಯ ಹವಾಮಾನ ಇಲಾಖೆ ಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಸಮುದ್ರ, ನದಿ ತೀರದ ಮತ್ತು ತಗ್ಗುಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.