ರಾಜ್ಯದಲ್ಲಿ ಜೂ.11ರಿಂದ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ರಾಜ್ಯದಲ್ಲಿ ಮುಂಗಾರು ಸ್ವಲ್ಪಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದು, ಜೂ. 11ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂ.10ರ ವರೆಗೆ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅಲ್ಪ ಅವಧಿಯ ತುಂತುರು ಮಳೆಯ ಮುನ್ಸೂಚನೆ ಇದೆ.

ಜೂ.11ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ ಎಂದು ತಿಳಿಸಿದೆ.ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಹಾಸನದಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೂ.10ರ ವರೆಗೆ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ಜೂ.11ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ ಎಂದು ಹೇಳಿದೆ.

ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇದೆ ಹವಮಾನ ಇಲಾಖೆ ತಿಳಿಸಿದೆ.