ಬೆಂಗಳೂರು: ಪ್ರೌಢಶಾಲಾ ಹಂತದಿಂದಲೇ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಈ ಸಂಬಂಧ ‘ಶಾಲೆಯಲ್ಲೇ ಕೌಶಲ’ ಎಂಬ ಕಾರ್ಯಕ್ರಮ ರೂಪಿಸಿದೆ.ಮೊದಲ ಹಂತದಲ್ಲಿ 200 ಸರ್ಕಾರಿ ಪ್ರೌಢಶಾಲೆಗಳು ಹಾಗೂ 50 ಪದವಿ ಪೂರ್ವ ಕಾಲೇಜುಗಳನ್ನು ಗುರುತಿಸಿದ್ದು, ಒಟ್ಟು 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ಮೂಲಕ ತರಬೇತಿ ನೀಡಲಾಗುತ್ತದೆ. ಮುಂದಿನ ವರ್ಷ ಇನ್ನಷ್ಟು ಶಾಲಾ–ಕಾಲೇಜುಗಳಿಗೆ ಈ ಕಾರ್ಯಕ್ರಮ ವಿಸ್ತರಿಸಲಾಗುತ್ತದೆ.
ಈಗಾಗಲೇ ಶಾಲಾ–ಕಾಲೇಜುಗಳನ್ನು ಗುರುತಿಸಿ, ಅಲ್ಲಿನ ವಿದ್ಯಾರ್ಥಿಗಳಿಗೆ ಯಾವ ಐಟಿಐನಲ್ಲಿ ತರಬೇತಿ ನೀಡಬೇಕು ಎಂಬುದನ್ನು ಅಂತಿಮಗೊಳಿಸಲಾಗಿದೆ. ಇದಕ್ಕೆ ತಗಲುವ ವೆಚ್ಚವನ್ನು ಶಿಕ್ಷಣ ಇಲಾಖೆ ಭರಿಸಲಿದ್ದು, ತರಬೇತಿ ನೀಡುವ ಕೆಲಸವನ್ನು ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮಾಡಲಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಕೆ.ವಿದ್ಯಾ ಕುಮಾರಿ ತಿಳಿಸಿದರು.












