ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡ್ನಲ್ಲಿ ಗುರುವಾರ ನಡೆದ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಲಾವಣ್ಯ ಎಂಬ ಯುವತಿಯನ್ನು ಹಾಡಹಗಲೇ ನಡುರಸ್ತೆಯಲ್ಲಿ ತಲವಾರಿನಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್ನನ್ನು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಾಥಮಿಕ ಮಾಹಿತಿಯಂತೆ, ಚೇತನ್ ಮತ್ತು ಲಾವಣ್ಯ ದೂರದ ಸಂಬಂಧಿಕರಾಗಿದ್ದು, ಚೇತನ್ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಯುವತಿ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಹತ್ಯೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕರಾವಳಿ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.















