ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯಿತ ಸಮುದಾಯದ ಪ್ರಭಾವಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಸೋಮಪ್ಪ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಇಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಹಂಗಾಮಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಬೊಮ್ಮಾಯಿ ಹಿಂದಿನ ಸಂಪುಟದಲ್ಲಿ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿದ್ದರು. ಬಿಎಸ್ ವೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬೊಮ್ಮಾಯಿ ಆಯ್ಕೆ ಹಿಂದೆ ಸಹಜವಾಗಿಯೇ ಸಮುದಾಯ ಹಾಗೂ ಬಿಎಸ್ ಯಡಿಯೂರಪ್ಪ ಅವರ ಪ್ರಭಾವ ಕೆಲಸ ಮಾಡಿದೆ.

ಬಸವರಾಜ ಬೊಮ್ಮಾಯಿ ಮೂಲತಃ ಜನತಾ ಪರಿವಾರದ ಹಿನ್ನೆಲೆ ಹೊಂದಿದವರು. ತಂದೆ ಎಸ್.ಆರ್.ಬೊಮ್ಮಾಯಿ ಜನತಾ ಪಕ್ಷದ ಪ್ರಭಾವಿ ಮುಖಂಡರಾಗಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ತಂದೆಯ ಕಾಲದಲ್ಲಿ ಬಸವರಾಜ ಬೊಮ್ಮಾಯಿ ಸಕ್ರಿಯ ರಾಜಕಾರಣದಲ್ಲಿ ಇಲ್ಲವಾದರೂ ತಂದೆಯ ರಾಜಕೀಯ ಪಯಣಕ್ಕೆ ಸಾಥ್ ನೀಡಿದವರು.

1998 ಹಾಗೂ 2004ರಲ್ಲಿ ಬೊಮ್ಮಾಯಿ ಎರಡು ಅವಧಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಆಯ್ಕೆ ಆಗಿದ್ದರು. ಜನತಾ ದಳದ ಮೂಲಕ ರಾಜಕೀಯ ಆರಂಭಿಸಿದ್ದ ಅವರು 1999 ರಲ್ಲಿ ಜನತಾ ದಳ ವಿಭಜನೆ ಆದಾಗ ಸಂಯುಕ್ತ ಜನತಾ ದಳವನ್ನು ಆಯ್ಕೆ ಮಾಡಿ ರಾಜಕೀಯ ಜೀವನ ಮುಂದುವರಿಸಿದ್ದರು. ಆ ಬಳಿಕ ಅವರು 2008ರಲ್ಲಿ ಬಿಜೆಪಿ ಸೇರಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಿಂದ ಶಾಸಕರಾಗಿ ಆಯ್ಕೆ ಆಗಿದ್ದಾರೆ.

2008ರಲ್ಲಿ ಬೃಹತ್ ನೀರಾವರಿ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದ ಬಸವರಾಜ ಬೊಮ್ಮಾಯಿ ಎಂಜಿನಿಯರಿಂಗ್ ಪದವೀಧರರು.