ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದ್ದು, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಹುದ್ದೆಗೆ ಹೊಸ ನಾಯಕನನ್ನು ಆಯ್ಕೆಮಾಡುವ ಪ್ರಕ್ರಿಯೆ ಆರಂಭವಾಗಲಿದೆ. ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಆಯ್ಕೆಗೆ ಪಕ್ಷದ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಬೆಂಗಳೂರು ತಲುಪಿದ್ದಾರೆ. ಪಕ್ಷದ ರಾಜ್ಯ ಘಟಕದ ಉಸ್ತುವಾರಿಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಕೂಡ ಬಂದಿದ್ದಾರೆ.
ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ಸಂಶದೀಯ ಮಂಡಳಿ ನಿರ್ಧಾರ ಕೈಗೊಂಡು, ವೀಕ್ಷಕರ ಮೂಲಕ ಸಂದೇಶ ರವಾನಿಸಿದೆ. ವೀಕ್ಷಕರು ತಂದಿರುವ ಸಂದೇಶಕ್ಕೆ ಪೂರಕವಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಬುಧವಾರವೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭವೂ ನಡೆಯುವ ಸಾಧ್ಯತೆ ಇದೆ.
ಲಿಂಗಾಯತ ಸಮುದಾಯದವರಿಗೇ ಮುಖ್ಯಮಂತ್ರಿ ಹುದ್ದೆ ನೀಡುವ ತೀರ್ಮಾನಕ್ಕೆ ಬಿಜೆಪಿ ಹೈಕಮಾಂಡ್ ಬಂದಿದೆ. ಅಂತಿಮವಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.












