ಕುಂದಾಪುರ: ಅಡುಗೆಯ ಮನೆಯ ಒಲೆಗೆ ಹಾಕಿದ್ದ ಬೆಂಕಿ ಆಕಸ್ಮಿಕವಾಗಿ ಸೀರೆಗೆ ತಗುಲಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಹಟ್ಟಿಕುದ್ರು ಎಂಬಲ್ಲಿ ಶುಕ್ರವಾರ ನಡೆದಿದೆ.
ಬಸ್ರೂರು ಗ್ರಾಮದ ಹಟ್ಟಿಕುದ್ರು ನಿವಾಸಿ 78 ವರ್ಷದ ಬುಡ್ಡು ಮೊಗವೀರ್ತಿ ಮೃತ ಮಹಿಳೆ. ಇವರು ಜ.19 ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಚಳಿ ಕಾಯಿಸುತ್ತಿದ್ದು, ಈ ವೇಳೆ ಅವರ ಸೀರೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊಟ್ಟೆ ಹಾಗೂ ಕೈ ಕಾಲುಗಳಿಗೆ ಗಂಭೀರ ಸ್ವರೂಪದ ಸುಟ್ಟ ಗಾಯವಾಗಿತ್ತು. ಕೂಡಲೇ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಅದರಂತೆ ವೆನ್ ಲಾಕ್ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬುಡ್ಡು ಮೊಗವೀರ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.