ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳದಲ್ಲಿ 14 ವರ್ಷದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಮೃತ ಬಾಲಕನನ್ನು ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ. ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಹಳೆಕೋಟೆಯ ವಾಣಿ ಹೈಸ್ಕೂಲ್‌ನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಶನಿವಾರ ಸಂಜೆ ಬಾಲಕ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಎನ್ನಲಾಗಿದೆ. ಆದರೆ, ಮರುದಿನ ಬೆಳಗ್ಗೆ ಆತ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಬಾಲಕ ತಂದೆ, ತಾಯಿ, ಸಹೋದರಿ ಹಾಗೂ ಇತರ ಬಂಧುಗಳನ್ನು ಅಗಲಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.















