ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ನಿಧನ

ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಚಂಪಾ ಎಂದೇ ಪ್ರಸಿದ್ದರಾಗಿದ್ದ ಚಂದ್ರಶೇಖರ ಪಾಟೀಲ (83) ಅವರು ಇಂದು ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂಪಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಇಂಗ್ಲಿಷ್ ಎಂ.ಎ. ಪದವಿ ಗಳಿಸಿದ್ದರಲ್ಲದೆ ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾ ಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮಾ ಪಡೆದರು.
ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್‌ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿದ್ದರು.

ಹೊಂಗನಸ ಹಡಗು, ನಾಳಿಗಿದೋ ಸ್ವಾಗತ, ಚರಿಪನಾದವೊ ಹಾಡು ಹಕ್ಕಿಯೋ ಮುಂತಾದ ಕವನಗಳು; ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಇವು ಚಂಪಾ ಅವರ ಪ್ರಸಿದ್ಧ ಕೃತಿಗಳು.