ಎಚ್ಚರ, ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಬೀಳುತ್ತೆ ₹5,000 ದಂಡ!

ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಇನ್ಮುಂದೆ ಭಾರಿ ದಂಡ ವಿಧಿಸುವ ಸಾಧ್ಯತೆ ಇದೆ. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಸ್ತುತ ಇರುವ ದಂಡಕ್ಕಿಂತ ಹಲವು ಪಟ್ಟು ಹೆಚ್ಚಿಸುವಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಸದ್ಯ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ ₹500 ದಂಡ ವಿಧಿಸಲಾಗುತ್ತಿದೆ. ಇದೀಗ ಮೊದಲ ಬಾರಿಗೆ ನಿಯಮ ಉಲ್ಲಂಘಿಸುವವರಿಗೆ ₹5,000 ದಂಡ ವಿಧಿಸುವಂತೆ ಸಾರಿಗೆ ಇಲಾಖೆ ಪ್ರಸ್ತಾವನೆ ಮಾಡಿದೆ.

ಅದೇ ರೀತಿ, ಎರಡನೇ ಬಾರಿಗೆ ನಿಯಮ ಉಲ್ಲಂಘಿಸಿದರೆ ₹10,000 ದಂಡ ವಿಧಿಸುವಂತೆ ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ. ಯಾವುದೇ ರೀತಿಯ ವಾಹನವನ್ನು ಫುಟ್‌ಪಾತ್ ಮೇಲೆ ಚಲಾಯಿಸಿದರೂ ಈ ದಂಡ ಅನ್ವಯಿಸುವ ಸಾಧ್ಯತೆಯಿದೆ.

ಪಾದಚಾರಿಗಳ ಸುರಕ್ಷತೆಗೆ ಕ್ರಮ

ಬೆಂಗಳೂರಿನ ಹಲವು ಭಾಗಗಳಲ್ಲಿ ಫುಟ್‌ಪಾತ್‌ಗಳ ಮೇಲೆಯೇ ವಾಹನಗಳ ಸಂಚಾರ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳು ಅನಿವಾರ್ಯವಾಗಿ ರಸ್ತೆಗೆ ಇಳಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಪಘಾತದ ಆತಂಕವೂ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ದಂಡದ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

ಈ ಸಂಬಂಧ ಸಾರಿಗೆ ಆಯುಕ್ತರು ಸರ್ಕಾರದ ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಪ್ರಸ್ತಾವನೆಗೆ ಕಾನೂನು ಇಲಾಖೆಯ ಅಭಿಪ್ರಾಯ ಪಡೆದುಕೊಂಡ ಬಳಿಕ ಅಂತಿಮ ಆದೇಶ ಹೊರಡಿಸುವ ಸಾಧ್ಯತೆಯಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.