ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳು ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಹೌದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ನವನೀತ ಶೆಟ್ಟಿ ಮೇಲ್ಮನವಿ ಮತ್ತು ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗೆ ಸಲ್ಲಿಸಿದ್ದಾರೆ.
2016ರಲ್ಲಿ ನಡೆದ ಈ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 8ರಂದು ಮಹತ್ವದ ತೀರ್ಪು ನೀಡಿತ್ತು. ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ಜೋತಿಷ್ಯ ನಿರಂಜನ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಂತೆ ಈ ಮೂವರು ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.
ಈ ತೀರ್ಪಿನ ವಿರುದ್ಧ ಜು. 5ರಂದು ರಾಜೇಶ್ವರಿ ಶೆಟ್ಟಿ ಹಾಗೂ ಜು.7ರಂದು ನವನೀತ್ ಶೆಟ್ಟಿ ಮೇಲ್ಮನವಿ ಹಾಗೂ ತಡೆಯಾಜ್ಞೆ ನೀಡಬೇಕು ಮತ್ತು ತಮಗೆ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆಯು ಮೂರು ವಾರದ ಬಳಿಕ ನಡೆಯುವ ಸಾಧ್ಯತೆಗಳಿವೆ. ಇನ್ನೋರ್ವ ಆರೋಪಿ ನಿರಂಜನ್ ಭಟ್ ಈವರೆಗೆ ಅರ್ಜಿ ಹಾಕಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.