ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ: ಜಿಲ್ಲೆಯ ಎಲ್ಲಾ ಮೋರ್ಚಾಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ನಿರಂತರ ವೈವಿಧ್ಯಮಯ ಕಾರ್ಯ ಚಟುವಟಿಕೆಗಳಿಂದ ಜಿಲ್ಲೆಯ ಮೋರ್ಚಾಗಳಲ್ಲೇ ಮೂಂಚೂಣಿಯಲ್ಲಿರುವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಮಲ್ಪೆ ಕಡಲ ತೀರದ ತುದಿಯಲ್ಲಿರುವ ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಂಡಿರುವುದು ರಾಜ್ಯಕ್ಕೇ ಮಾದರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಉಡುಪಿ-ಮಲ್ಪೆ ಕಡಲ ತೀರದ ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಇಂದು ಸ್ಥಳೀಯಾಡಳಿತ ಸಹಿತ ಹೆಚ್ಚಿನ ಎಲ್ಲಾ ರಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿ ಇದೆ. ಮಹಿಳಾ ಸಬಲೀಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ವಿಶೇಷ ಯೋಜನೆಗಳಿವೆ. ಈ ನಿಟ್ಟಿನಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಅತ್ಯಂತ ಮಹತ್ವ ಹೊಂದಿದೆ. ಯಾವುದೇ ಚುನಾವಣೆಗಳ ಸಂದರ್ಭದಲ್ಲಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಹಿತ ಮಹಿಳಾ ಮೋರ್ಚಾ ಕೂಡಾ ಯಾವ ರೀತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷಕ್ಕೆ ತನ್ನದೇ ಆದ ಅಮೂಲ್ಯ ಕೊಡುಗೆ ನೀಡಬಹುದು ಎಂಬ ಬಗ್ಗೆ ಆಲೋಚಿಸಬೇಕಿದೆ ಎಂದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಚಟುವಟಿಕೆಗಳ ಜೊತೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಸಹಕಾರದೊಂದಿಗೆ ಮಹಿಳೆಯರ ಅಭ್ಯುದಯಕ್ಕಾಗಿ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಹಳ್ಳಿ ಹಳ್ಳಿಗಳಲ್ಲಿ ಜನಸೇವೆಯ ಜೊತೆಗೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಯಶಸ್ಸು ಹೊಂದಲಿ. ಮೋರ್ಚಾಗಳ ಎಲ್ಲಾ ವಿಶೇಷ ಚಟುವಟಿಕೆಗಳಿಗೆ ಜಿಲ್ಲಾ ಬಿಜೆಪಿಯ ಸಂಪೂರ್ಣ ಸಹಕಾರವಿದೆ ಎಂದು ಕುಯಿಲಾಡಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಹಾಗೂ ಮಹಿಳಾ ಮೋರ್ಚಾ ಜಿಲ್ಲಾ ಪ್ರಭಾರಿ ಸುನೀತಾ ಜಗದೀಶ್ ಚಿಕ್ಕಮಗಳೂರು, ಮೀನುಗಾರಿಕಾ ನಿಗಮ ಮಂಗಳೂರು ಇದರ ಸದಸ್ಯೆಯಾಗಿ ನೇಮಕಗೊಂಡಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಮ್. ಸುವರ್ಣ, ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈರುವ ಜಿಲ್ಲಾಮಹಿಳಾ ಮೋರ್ಚಾ ಉಪಾಧ್ಯಕ್ಷೆ ರಾಷ್ಟ್ರೀಯ ಈಜು ಪಟು ವಿದ್ಯಾ ಪೈ ಕಾರ್ಕಳ, ಅಕ್ರಮ ಸಕ್ರಮ ಸಮಿತಿ ಹೆಬ್ರಿ ಸದಸ್ಯರಾಗಿ ನೇಮಕಗೊಂಡಿರುವ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್ ಮುನಿಯಾಲು, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆಯಾಗಿ ನೇಮಕಗೊಂಡಿರುವ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಶ್ವಿನಿ ಶೆಟ್ಟಿ ಪಂದುಬೆಟ್ಟು, ಇಂದ್ರಾಣಿ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆಯಾಗಿ ನೇಮಕಗೊಂಡಿರುವ ಉಡುಪಿ ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಜಾಲಾ ಸತೀಶ್ ಇಂದ್ರಾಳಿ ಅವರನ್ನು ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಸನ್ಮಾನಿಸಲಾಯಿತು.

ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಹಾಗೂ ಜಿಲ್ಲಾ ಪ್ರಭಾರಿ ಸುನೀತಾ ಜಗದೀಶ್ ಮಾತನಾಡಿ, ಬಿಜೆಪಿ ಎಂದರೆ ಪಾರ್ಟಿ ವಿದ್ ಎ ಡಿಫರೆನ್ಸ್ ಎಂಬ ಮಾತಿದೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ನಿಗದಿತ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಿದಾಗ ಇನ್ನೂ ಹೆಚ್ಚಿನ ಅವಕಾಶಗಳನ್ನು ನೀಡುವ ಪಕ್ಷ ಬಿಜೆಪಿ. ಇಂದು ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತದಲ್ಲಿ ಹೆಣ್ಣು ಮಗುವಿನ ಜನನ ಹಾಗೂ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಉಪಯೋಗವಾಗುವ ಅನೇಕ ಯೋಜನೆಗಳಿವೆ. ಇದರ ಪರಿಣಾಮವಾಗಿ ಲಿಂಗ ಸಮಾನತೆಯಲ್ಲಿ ಮಹಿಳೆಯರ ಅನುಪಾತದ ಬೆಳವಣಿಗೆ ಸಾಧ್ಯವಾಗಿದೆ. ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿಯವರ ಕಾರ್ಯ ಶೈಲಿ ಹಾಗೂ ಜಿಲ್ಲಾ ತಂಡ ಪ್ರಶಂಸೆಗೆ ಪಾತ್ರವಾಗಿದೆ. ಪ್ರವಾಸೀತಾಣದಲ್ಲಿ ವಿನೂತನ ರೀತಿಯಲ್ಲಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಿರುವುದು ರಾಜ್ಯಕ್ಕೇ ಮಾದರಿಯಾಗಿದೆ. ಸರಕಾರದ ವಿವಿಧ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಮೂಲಕ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಪಕ್ಷ ಸಂಘಟನೆ ಕಾರ್ಯದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಇನ್ನಷ್ಟು ಯಶಸ್ಸನ್ನು ಹೊಂದಲಿ ಎಂದು ಶುಭ ಹಾರೈಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ಮಾತನಾಡಿ, ಕಾರ್ಯಕಾರಿಣಿ ಸಭೆಯು ಹಿಂದಿನ ಕಾರ್ಯ ಚಟುವಟಿಕೆಗಳ ಅವಲೋಕನ ಮತ್ತು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚೆಗೆ ಪೂರಕವಾಗಿರುತ್ತದೆ. ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಒಂದು ತಂಡವಾಗಿ ಮಾದರಿ ಮತ್ತು ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಜಿಲ್ಲಾ ಬಿಜೆಪಿಯ ಕಾರ್ಯ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಕೈಜೋಡಿಸುತ್ತಿರುವುದು ಅಭಿನಂದನೀಯ. ಪ್ರಾಯಶಃ ರಾಜ್ಯ ಬಿಜೆಪಿಯ ಇತಿಹಾಸದಲ್ಲೇ ಬೋಟ್ ಹೌಸ್ ನಲ್ಲಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ವ್ಯವಸ್ಥಿತವಾಗಿ ಆಯೋಜಿಸಿರುವುದು ಐತಿಹಾಸಿಕ. ಜಿಲ್ಲಾ ಮಹಿಳಾ ಮೋರ್ಚಾದ ಮುಂದಿನ ವಿಶೇಷ ಕಾರ್ಯ ಚಟುವಟಿಕೆಗಳಿಗೆ ಜಿಲ್ಲಾ ಬಿಜೆಪಿಯ ಮೂಲಕ ಸಂಪೂರ್ಣ ಸಹಕಾರ ನೀಡಲಾಗುವುದು. ಪಕ್ಷ ಸಂಘಟನೆಯ ಜೊತೆಗೆ ಪಕ್ಷದ ವಿವಿಧ ಚುನಾವಣೆಯ ಸಂದರ್ಭದಲ್ಲಿಯೂ ಜಿಲ್ಲಾ ಮಹಿಳಾ ಮೋರ್ಚಾ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಮತ್ತು ಜನಸಾಮಾನ್ಯರ ನಡುವೆ ಪರಿಣಾಮಕಾರಿ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸುವಂತಾಗಲಿ ಎಂದರು.

ಈ ಸಂದರ್ಭದಲ್ಲಿ ಜನತೆಯ ಹಲವಾರು ವರ್ಷಗಳ ಬೇಡಿಕೆಯಾದ ಕೋಡಿ ಬೆಂಗ್ರೆ ಮತ್ತು ಹಂಗಾರಕಟ್ಟ ಸಂಪರ್ಕ ಸೇತುವೆ ನಿರ್ಮಾಣದ ಬಗ್ಗೆ ಸರಕಾರದ ಗಮನ ಸೆಳೆಯುವಂತೆ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ವಿನಂತಿಸಲಾಯಿತು.

ಮಹಿಳಾ ಮೋರ್ಚಾ ಉಡುಪಿ ನಗರ, ಉಡುಪಿ ಗ್ರಾಮಾಂತರ, ಕಾಪು, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಮಂಡಲಗಳ ಅಧ್ಯಕ್ಷರು ಕಾರ್ಯ ಚಟುವಟಿಕೆಗಳ ವರದಿಯನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜಿಪಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ಶಿವಾನಂದ ಕೋಟ್ಯಾನ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಮಹಿಳಾ ಮೋರ್ಚಾದ ವಿವಿಧ ಮಂಡಲಗಳ ಅಧ್ಯಕ್ಷರಾದ ಸರೋಜ ಶೆಟ್ಟಿಗಾರ್ ಉಡುಪಿ ನಗರ, ಸುಮಾ ಶೆಟ್ಟಿ ಕಾಪು, ರೂಪಾ ಪೈ ಕುಂದಾಪುರ, ವಸಂತಿ ಸತೀಶ್ ಪೂಜಾರಿ ಉಡುಪಿ ಗ್ರಾಮಾಂತರ, ಮಾಲಿನಿ ಶೆಟ್ಟಿ ಕಾರ್ಕಳ ಹಾಗೂ ಮಹಿಳಾ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಪ್ರಮೀಳಾ ಹರೀಶ್ ವಂದಿಸಿದರು.