ಬಿಜೆಪಿ ಬಾಗಿಲು ತಟ್ಟಿದ ವಿನಯ್ ಕುಲಕರ್ಣಿ: ಬಿಜೆಪಿಯಲ್ಲಿ ತೀವ್ರ ವಿರೋಧ

ನವದೆಹಲಿ: ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಿಜೆಪಿ ಬಾಗಿಲು ಬಡಿಯಲು ಮುಂದಾಗಿದ್ದು, ಸಿಬಿಐ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯು ತೀವ್ರಗೊಳಿಸಿದೆ. ಈ ಕಾರಣದಿಂದಲೇ ಧಾರವಾಡದ ವಿನಯ್‌ ಕುಲಕರ್ಣಿ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸೇರಬಯಸಲು ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಎರಡು ತಿಂಗಳಿಂದ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿಯ ಬೆಂಗಳೂರಿನ ಮುಖಂಡರೊಬ್ಬರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಕಳೆದ 3 ದಿನಗಳಿಂದ ಬೀಡು ಬಿಟ್ಟಿರುವ ವಿನಯ್‌, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್‌ ಶಾ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಲ್‌. ಸಂತೋಷ್ ಮತ್ತಿತರರ ಭೇಟಿಗೆ ಪ್ರಯತ್ನ ನಡೆಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಕುಲಕರ್ಣಿ ಸೇರ್ಪಡೆಗೆ ವಿರೋಧ:
ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆಗೆ ಧಾರವಾಡ ಬಿಜೆಪಿ ಮುಖಂಡ ಸಹಿತ ಕೆಲ ಹಿರಿಯ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಿಬಿಐ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಇದಕ್ಕೆ ನಾವು ಅವಕಾಶ ಮಾಡಿಕೊಡಬಾರದು ಎಂದು ಮುಖಂಡರು ಹೇಳುತ್ತಿದ್ದಾರೆ .