ಉಡುಪಿ: ಪರಶುರಾಮ ಥೀಮ್ ಪಾರ್ಕ್ ನಿರ್ಮಾಣವಾಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ನೀಡಿದ್ದು, ಕಂಚಿನ ಪ್ರತಿಮೆ ಸ್ಥಾಪಿಸುವುದಾಗಿ ಘೋಷಿಸಿದ್ದು ಕೂಡ ಬಿಜೆಪಿಯವರೇ. ಆದರೆ ಈಗ ವಿವಾದ ಸೃಷ್ಟಿಸಿ, ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ದೂಷಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಉಡುಪಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಕಾಂಗ್ರೆಸ್ ಕೂಡ ಬೆಂಬಲ ನೀಡಿತ್ತು. ಆದರೆ ಪಾರ್ಕ್ ನಿರ್ಮಾಣದ ಬಳಿಕ ಏನಾಯಿತು, ಮುಂದಿನ ಬೆಳವಣಿಗೆಗಳೇನು ಎಂಬುದು ಜಿಲ್ಲೆಯ ಜನರಿಗೆ ತಿಳಿದಿದೆ.
ಉಡುಪಿ ಜಿಲ್ಲೆಯ ಜನರು ಪ್ರಜ್ಞಾವಂತರಾಗಿದ್ದು, ಬಿಜೆಪಿ ನಾಯಕರು ಪದೇಪದೇ ಹಿಂದಿನ ವಿಚಾರಗಳನ್ನು ಮರೆತಂತೆ ವರ್ತಿಸಬಾರದು ಎಂದರು.
ಪಾರ್ಕ್ ನಿರ್ಮಿಸಿ, ಬಳಿಕ ಸಮಸ್ಯೆ ಸೃಷ್ಟಿಸಿ ಈಗ ನೀವೇ ಪ್ರತಿಭಟನೆ ನಡೆಸಿ ಜನರ ಆಕ್ರೋಶಕ್ಕೆ ಗುರಿಯಾಗಬೇಡಿ. ಈ ಸಮಸ್ಯೆ ಉದ್ಭವಿಸಿರುವುದು ಬಿಜೆಪಿ ಆಡಳಿತದ ಅವಧಿಯಲ್ಲಿ. ಈಗಲೂ ಸಮಸ್ಯೆಗೆ ಬಿಜೆಪಿಯೇ ಹೊಣೆ. ಇದರಲ್ಲಿ ಕಾಂಗ್ರೆಸ್ನ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವಿಚಾರ ನ್ಯಾಯಾಲಯದಲ್ಲಿದ್ದ ಕಾರಣ ಈವರೆಗೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ನ್ಯಾಯಾಲಯದ ಆದೇಶ ಹೊರಬಿದ್ದಿದೆ.
ಸೂಕ್ತ ಸಮಯದಲ್ಲಿ ಥೀಮ್ ಪಾರ್ಕ್ ಅನ್ನು ಅಚ್ಚುಕಟ್ಟಾಗಿ ಅಭಿವೃದ್ಧಿಪಡಿಸಿ ಸರಿಪಡಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಿಜ್ವಾನ್ ಅರ್ಷದ್ ತಿಳಿಸಿದರು.















