ಐದು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳ ನೇಮಕಕ್ಕೆ ಬಿಜೆಪಿ ಸಿದ್ದತೆ; ಒಕ್ಕಲಿಗ ಸಮುದಾಯಕ್ಕೆ ದೊರೆಯಲಿದೆಯೆ ರಾಜ್ಯದ ಚುಕ್ಕಾಣಿ?

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಭಾರತೀಯ ಜನತಾ ಪಕ್ಷವು ಐದು ರಾಜ್ಯಗಳಲ್ಲಿ ತನ್ನ ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರ ನೇಮಕಗಳನ್ನು ಕೈಗೊಳ್ಳಲಿದೆ. ಗುಜರಾತ್, ತೆಲಂಗಾಣ, ಪಂಜಾಬ್, ಮಧ್ಯಪ್ರದೇಶ ಮತ್ತು ಕರ್ನಾಟಕಕ್ಕೆ ಹೊಸ ರಾಜ್ಯಾಧ್ಯಕ್ಷರನ್ನು ಹೆಸರಿಸುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ, ಜಿ ಕಿಶನ್ ರೆಡ್ಡಿ ಅವರನ್ನು ತೆಲಂಗಾಣ ಘಟಕದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಬಹುದು ಮತ್ತು ಪಂಜಾಬ್ ಘಟಕದ ಮುಖ್ಯಸ್ಥರಾಗಿ ಸುನೀಲ್ ಜಾಖರ್ ಅವರಿಗೆ ಜವಾಬ್ದಾರಿಯನ್ನು ನೀಡಬಹುದು. ಇದೇ ವೇಳೆ ಅಶ್ವಥ್ ನಾರಾಯಣ್ ಅಥವಾ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರನ್ನಾಗಿ ಮಾಡಬಹುದು ಎನ್ನಲಾಗಿದೆ.

ಆದಿತ್ಯವಾರದಂದು ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಭಾರತೀಯ ಜನತಾ ಪಕ್ಷವನ್ನು ಸೇರಿದ ಬಳಿಕ ರಾಷ್ಟ್ರಮಟ್ಟದಲ್ಲಿ ಸಂಪುಟದಲ್ಲಿ ಹಲವು ಬದಲಾವಣೆಗಳಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸರಣಿ ಸಭೆ ನಡೆಯುತ್ತಿರುವ ವರದಿಗಳಾಗಿವೆ.

ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕರ ಹೆಸರುಗಳು ಕೇಳಿಬಂದಿದ್ದು, ಆರ್‌, ಅಶೋಕ್‌, ಬಸವರಾಜ ಬೊಮ್ಮಾಯಿ, ಸಿಟಿ ರವಿ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್ ಯತ್ನಾಳ್‌, ಬಿವೈ ವಿಜಯೇಂದ್ರ, ವಿ ಸೋಮಣ್ಣ, ಮಾಜಿ ಸಚಿವ ಸುನೀಲ್‌ ಕುಮಾರ್‌ ಹೀಗೆ ಹಲವರ ಹೆಸರು ಮುಂಚೂಣಿಯಲ್ಲಿದೆ.

ವಿರೋಧ ಪಕ್ಷದ ನಾಯಕ ಸ್ಥಾನವನ್ನು ಲಿಂಗಾಯತರಿಗೆ ನೀಡಿದರೆ, ರಾಜ್ಯಾಧ್ಯಕ್ಷ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು ಎಂದು ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಅವರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ವಿರೋಧ ಪಕ್ಷದ ನಾಯಕನಾಗಿ ಲಿಂಗಾಯತರಿಗೆ ಕೊಟ್ಟರೆ ರಾಜ್ಯಾಧ್ಯಕ್ಷ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಶ್ವಥ್ ನಾರಾಯಣ್ ಅಥವಾ ಶೋಭಾ ಕರಂದ್ಲಾಜೆ ಅವರಲ್ಲಿ ಯಾರಾದರೊಬ್ಬರು ಆಯ್ಕೆ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕರಿಲ್ಲದೆ ಅಧಿವೇಶನ ನಡೆಯುತ್ತಿದ್ದು, ಪಕ್ಷವು ಮುಜುಗರವನ್ನು ಅನುಭವಿಸುತ್ತಿದೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು ಪಕ್ಷವನ್ನು ಸಂಘಟಿಸಲು ಸಮರ್ಥ ನಾಯಕರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪಕ್ಷದ ಹಿರಿಯರು ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.