ನವದೆಹಲಿ: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು 2019ನೇ ಸಾಲಿನ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಿನಿ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಗೆ ಅಮಿತಾಭ್ ಅವರ ಹೆಸರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಮಂಗಳವಾರ ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ.
ವಿನೋದ್ ಖನ್ನ ಅವರಿಗೆ 2017ರಲ್ಲಿ ಈ ಪ್ರಶಸ್ತಿ ಸಿಕ್ಕಿದ್ದರೆ ಡಾ. ರಾಜ್ ಕುಮಾರ್ ಅವರು 1995ರಲ್ಲಿ ಈ ಗೌರವಕ್ಕೆ ಪಾತ್ರರಾಗಿದ್ದರು.
ಅಮಿತಾಭ್ ಬಚ್ಚನ್ ಅವರನ್ನು ಪದ್ಮಭೂಷಣ, ಪದ್ಮವಿಭೂಷಣ ಗೌರವ, ನಟನೆಗಾಗಿ ನಾಲ್ಕು ಬಾರಿ ರಾಷ್ಟ್ರಪ್ರಶಸ್ತಿ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಈಗ, ಅವರ ಕಿರೀಟಕ್ಕೆ ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯ ಗರಿಯೂ ಸೇರಿಕೊಂಡಂತಾಗಿದೆ. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದ ವೇಳೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.












