ಬೈಂದೂರು: ಮಾರ್ಚ್ 25 ರಿಂದ ಏಪ್ರಿಲ್ 06 ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ

ಬೈಂದೂರು: 2024ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 06 ರ ವರೆಗೆ ನಡೆಯಲಿದ್ದು, ಸದ್ರಿ ಪರೀಕ್ಷೆಯ ಬೈಂದೂರು ವಲಯದ ಪರೀಕ್ಷಾ ಕೇಂದ್ರವಾದ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜು, ಬೈಂದೂರು ವಲಯ (ಜಿ.ಎ.049) ಈ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಬೋಳಂಬಳ್ಳಿ, ಕಾಲೋಡು ಕಡೆಯಿಂದ ಬರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪರೀಕ್ಷಾ ಕೇಂದ್ರನ್ನು ತಲುಪಲು ಬಸ್‌ನ ಅವಶ್ಯಕತೆ ಇರವುದರಿಂದ ಸದ್ರಿ ಮಾರ್ಗದಲ್ಲಿ ಬಸ್ ವ್ಯವಸ್ಥೆಯನ್ನು ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿರುತ್ತಾರೆ.

ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ. ಜಿಲ್ಲೆಯ 272 ಶಾಲೆಗಳಿಂದ 14,331 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು ಪರೀಕ್ಷೆಯನ್ನು ನಡೆಸಲು ಒಟ್ಟು 806 ಮಂದಿಯನ್ನು ನೇಮಿಸಲಾಗಿದೆ. ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು ಪ್ರಶ್ನೆಪತ್ರಿಕೆ ಪಾಲಕರು ಮತ್ತು ಕೊಠಡಿ ಮೇಲ್ವಿಚಾರಕರಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಉತ್ತರ ಪತ್ರಿಕೆಗಳನ್ನು ಪಡೆಯಲು ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯಲು ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಸಂಚಾರಿ ವಿಚಕ್ಷಣಾ ದಳವನ್ನು ನೇಮಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಸ್ಥಾನಿಕ ಜಾಗೃತ ದಳವನ್ನು ಪೊಲೀಸ್ ಪಹರೆಯನ್ನು ತುರ್ತು ಚಿಕಿತ್ಸಾ ಘಟಕವನ್ನೂ ಸ್ಥಾಪಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ತನಕ ಸಿ.ಆರ್.ಪಿ.ಸಿ ಸೆಕ್ಷನ್ 144 ರಂತೆ ಪ್ರತಿಬಂಧಕಾಜ್ಞೆಯನ್ನು ವಿಧಿಸಲಾಗಿದೆ
ಪರೀಕ್ಷೆಗಳಲ್ಲಿ ಅವ್ಯವಹಾರ ನಡೆಯದಂತೆ ಪಾರದರ್ಶಕತೆಯಿಂದ ನಡೆಸಲು ಪರೀಕ್ಷೆ ನಡೆಯುವ ಕೇಂದ್ರಗಳ ಕೊಠಡಿಗಳಲ್ಲಿ
ಸಿ.ಸಿ.ಟಿ.ವಿಯನ್ನು ಅಳವಡಿಸಿದ್ದು ಜಿಲ್ಲಾ ಪಂಚಾಯತ್ ಸಂಕೀರ್ಣದಲ್ಲಿರುವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಯಲಿ
ಸಿ.ಸಿ.ಟಿ.ವಿಯನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಶೇಖರಣಾ ಸ್ಥಳದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ
ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದು ಸರಕಾರದ ಸುತ್ತೋಲೆಯಂತೆ ರಾಜ್ಯದ ಎಲ್ಲಾ
ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಹಾಗೂ ಖಾಸಗಿ ಅನುದಾನಿತ ಮತ್ತು ಅನುದಾನರಹಿತ
ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ
ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅನುಮತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.