ಕುಂದಾಪುರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬಡವರ, ಹಿಂದುಳಿದ ವರ್ಗದವರ ಏಳಿಗೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಗರಿಬಿ ಹಠಾವೋ ಎಂಬ ಘೋಷಣೆಯೊಂದಿಗೆ ಕಳೆದ ಸುಮಾರು ೬೦ ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ಗೆ ಬಡತನ ದೂರ ಮಾಡಲು ಸಾಧ್ಯವಾಗಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.
ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಕಂಚುಗೋಡು ಭಗತ್ ನಗರದಲ್ಲಿ ಜರಗಿದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಆಯುಷ್ಮಾನ್ ಭಾರತ್ ಯೋಜನೆ, ಉಚಿತ ಗ್ಯಾಸ್ ವಿತರಣೆ, ಶೌಚಾಲಯಗಳ ನಿರ್ಮಾಣ, ಜನೌಷಧ ಕೇಂದ್ರಗಳ ಪ್ರಾರಂಭ ಸೇರಿದಂತೆ ಅನೇಕ ಯೋಜನೆಗಳ ಮೂಲಕ ನರೇಂದ್ರ ಮೋದಿಯವರ ಸರಕಾರ ಬಡವರ ಬೆಂಬಲಕ್ಕೆ ನಿಂತಿದೆ. ಮೀನುಗಾರರಿಗೆ ಸರಕಾರ ಯೋಜನೆಗಳ ಪ್ರಯೋಜನ ನೇರವಾಗಿ ದೊರೆಯಲು ಮತ್ತು ಮೀನುಗಾರರ ಅಭಿವೃದ್ಧಿಗಾಗಿ ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ ಪ್ರಾರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ ಎಂದರು.
ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಮಾತನಾಡಿದರು. ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ, ಯುವಮೋರ್ಚಾ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ರಾಜ್ಯ ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ, ಬೈಂದೂರು ಕ್ಷೇತ್ರ ಪ್ರಭಾರಿ ಪ್ರವೀಣ ಶೆಟ್ಟಿ ಗುರ್ಮೆ, ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ದೀಪಕಕುಮಾರ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.