ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದು: ಉಮೇಶ್ ಕತ್ತಿ

ಬೆಳಗಾವಿ: ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಡ್ ನ್ನು ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದರು.

ಈ ಕುರಿತಂತೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು, ಮನೆಯಲ್ಲಿ ಬೈಕ್, ಟೆಲಿವಿಷನ್, ಫ್ರಿಡ್ಜ್ ಹೊಂದಿದ್ದವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಇಂತಹ ಬಿಪಿಎಲ್ ಕಾರ್ಡುದಾರರು ತಮ್ಮ ಕಾರ್ಡ್‌ಗಳನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೂ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವರ್ಷಕ್ಕೆ 1.20 ಲಕ್ಷ ರೂ.ಗಿಂತ ಅಧಿಕ ವರಮಾನ ಹೊಂದಿರುವವರು ಸಹ ಬಿಪಿಎಲ್ ಕಾರ್ಡ್ ಹೊಂದಿರುವಂತಿಲ್ಲ. ಅವುಗಳನ್ನು ಮಾರ್ಚ್ 31ರ ಒಳಗೆ ವಾಪಸ್ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಮೀಕ್ಷೆ ನಡೆಸಿ ಕಾರ್ಡುಗಳನ್ನು ಹಿಂಪಡೆಯುತ್ತದೆ.

ಏಪ್ರಿಲ್ ಬಳಿಕ ಸರ್ಕಾರ ಬಿಪಿಎಲ್ ಕಾರ್ಡುದಾರರ ಪರಿಶೀಲನೆ ನಡೆಸಲಿದೆ. ಒಂದು ವೇಳೆ ಈ ಎಲ್ಲ ಸೌಲಭ್ಯಗಳು ಇದ್ದರೂ ಬಿಪಿಎಲ್ ಕಾರ್ಡು ಹೊಂದಿದ್ದರೆ ಅಂತಹವರಿಗೆ ದಂಡದ ಜತೆಗೆ ಶಿಕ್ಷೆ ಸಹ ನೀಡಲಾಗುತ್ತದೆ ಎಂದು ಉಮೇಶ್ ಕತ್ತಿ ಎಚ್ಚರಿಕೆ ನೀಡಿದ್ದಾರೆ.