ಉಡುಪಿ: ನಗರಸಭೆಯ ಪೌರಕಾರ್ಮಿಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಮಾ ಕ್ಯಾಸೆಟ್ ಕಾರ್ನರ್ ಅಂಗಡಿಯ ವ್ಯಾಪಾರ ಪರವಾನಿಗೆ ಅನ್ನು ಉಡುಪಿ ನಗರಸಭೆ ರದ್ದು ಮಾಡಿದೆ.
ಇಂದು ಉಡುಪಿ ನಗರಸಭೆಯಲ್ಲಿ ನಡೆದ ತುರ್ತು ಖಂಡನಾ ನಿರ್ಣಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶಾಸಕ ರಘುಪತಿ ಭಟ್ ಮಾತನಾಡಿ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಮೇಲೆ ಹಲ್ಲೆ, ದೌರ್ಜನ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಈ ವಿಷಯದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪೌರಕಾರ್ಮಿಕನಿಗೆ ಹಲ್ಲೆ ನಡೆಸಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ, ಗುತ್ತಿಗೆ ನೌಕರರ ರಕ್ಷಣೆಗೆ ನಗರಸಭೆ ಬದ್ಧವಾಗಿದೆ ಎಂದರು. ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಪೌರಾಯುಕ್ತ ಉದಯ ಶೆಟ್ಟಿ ಉಪಸ್ಥಿತರಿದ್ದರು.