ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆಯ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ ಆರಂಭಿಸಿದ್ದ ಶೋಧ ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಈ ವೇಳೆ ₹57 ಲಕ್ಷ ನಗದು ಮತ್ತು ಹಲವು ದಾಖಲೆಗಳನ್ನು ತನಿಖಾ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಸದಾಶಿವನಗರದ ಡಿಕೆಶಿ ಮನೆ ಸಹಿತ ಕರ್ನಾಟಕದ ಒಂಭತ್ತು, ದೆಹಲಿಯ ನಾಲ್ಕು ಮತ್ತು ಮುಂಬೈನ ಒಂದು ಸ್ಥಳ ಒಳಗೊಂಡಂತೆ ಸಿಬಿಐ ಅಧಿಕಾರಿಗಳು ಇಂದು ಡಿಕೆಶಿಗೆ ಸಂಬಂಧಿಸಿದಂತೆ 14 ಕಡೆಗಳಲ್ಲಿ ದಾಳಿ ನಡೆಸಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.
ದಾಳಿ ವೇಳೆ ₹ 57 ಲಕ್ಷ ನಗದು, ಆಸ್ತಿ ಒಡೆತನಕ್ಕೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ದಾಖಲೆಗಳು ಮತ್ತು ಕಂಪ್ಯೂಟರ್ ಹಾರ್ಡ್ ಡಿಸ್ಕ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.